Sunday, 24th June 2018

ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು – ಮೂವರ ದುರ್ಮರಣ

ಚಿಕ್ಕಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ-ವಿಜಯಪುರ ಮಾರ್ಗದ ದರ್ಗಾ ಬಳಿ ನಡೆದಿದೆ.

ದೊಡ್ಡಬಳ್ಳಾಪುರ ತಾಲೂಕು ಮಾರಹಳ್ಳಿ ಗ್ರಾಮದ ಪಾರ್ವತಮ್ಮ(68), ವಿಜಯ್ ಕುಮಾರ್(42) ಮತ್ತು ಹರೀಶ್ (38) ಮೃತ ದುರ್ದೈವಿಗಳು. ಅಫಘಾತದಲ್ಲಿ 8 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.

ಚಾಲಕನ ಅತಿವೇಗ ಹಾಗೂ ಅಜಾಗಾರೂಕತೆಯಿಂದ ನಿಯಂತ್ರಣ ತಪ್ಪಿ ಕಾರು ದರ್ಗಾದ ಬಳಿ ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯೆ ಮೂವರು ಮೃತಪಟ್ಟಿದ್ದಾರೆ. ಇನ್ನುಳಿದ 8 ಮಂದಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

Leave a Reply

Your email address will not be published. Required fields are marked *