Karnataka
ಈಶ್ವರಪ್ಪ ಆಡಳಿತ ನಡೆಸಲು ವಿಫಲ- ಅಧಿಕಾರಿಗಳ ವಿರುದ್ಧ ಮಾತನಾಡಿ ಆತ್ಮಸ್ಥೈರ್ಯ ಕುಗ್ಗಿಸುತ್ತಿದ್ದಾರೆ

– ಮಾಜಿ ಶಾಸಕ ಪ್ರಸನ್ನಕುಮಾರ್ ವಾಗ್ದಾಳಿ
ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸಚಿವರಾಗಿ, ಶಾಸಕರಾಗಿ ಆಡಳಿತ ನಡೆಸಲು ವಿಫಲರಾಗಿದ್ದಾರೆ. ಕೂಡಲೇ ಅವರು ಸಚಿವ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ಪ್ರಸನ್ನಕುಮಾರ್ ಆಗ್ರಹಿಸಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಈಶ್ವರಪ್ಪ ಅಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಅವರ ಆತ್ಮಸ್ಥೈರ್ಯ ಕುಗ್ಗುವಂತೆ ಮಾಡುತ್ತಿದ್ದಾರೆ. ಶುಕ್ರವಾರ ಎಸ್ಪಿ ವಿರುದ್ಧ ಹಾಗೂ ಪೊಲೀಸ್ ಇಲಾಖೆ ವಿರುದ್ಧ ಹರಿಹಾಯ್ದಿದ್ದಾರೆ. ನಿಜಕ್ಕೂ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ತಿಳಿಸಿದರು.
ಅಧಿಕಾರಿಗಳ ವರ್ಗಾವಣೆ ಮಾಡಬೇಕು ಎಂದಾಗ ಅಧಿಕಾರಿಗಳ ವಿರುದ್ಧ ಹರಿಹಾಯುವುದು ಸಚಿವರ ಖಯಾಲಿಯಾಗಿದೆ. ಈ ಹಿಂದೆ ಮಹಾನಗರ ಪಾಲಿಕೆ ಆಯುಕ್ತರನ್ನು ವರ್ಗಾವಣೆ ಮಾಡಿಸುವ ಸಲುವಾಗಿ ಇದೇ ರೀತಿ ಮಾಡಿದ್ದರು. ಕಾನೂನಾತ್ಮಕವಾಗಿ ಕೆಲಸ ನಿರ್ವಹಿಸುತ್ತಿದ್ದ ಶಿವಮೊಗ್ಗ ತಹಶೀಲ್ದಾರ್ ಗಿರೀಶ್ ಅವರನ್ನು ವರ್ಗಾವಣೆ ಮಾಡಿಸಿದರು. ಇನ್ನು ಮೆಗ್ಗಾನ್ ಭೋಧನಾ ಆಸ್ಪತ್ರೆ ಡೀನ್ ಬದಲಾಯಿಸುವ ಸಲುವಾಗಿ ಅವರು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ ಎಂದು ಆರೋಪ ಮಾಡಿದ್ದರು. ಬಳಿಕ ಅವರನ್ನು ವರ್ಗಾವಣೆ ಮಾಡಿಸಿ ತಮಗೆ ಬೇಕಾದವರನ್ನು ಹಾಕಿಸಿಕೊಂಡರು. ಇದೀಗ ಎಸ್ಪಿ ವಿರುದ್ಧ ಹರಿಹಾಯುತ್ತಿದ್ದಾರೆ ಎಂದರು.
ಸಚಿವರು ಸರಿಯಾಗಿ ಕೆಲಸ ನಿರ್ವಹಿಸದೇ ಅವರ ತಪ್ಪನ್ನು ಮುಚ್ಚಿಕೊಳ್ಳಲು ಅಧಿಕಾರಿಗಳ ಮೇಲೆ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಆ ಮೂಲಕ ಸಮರ್ಥ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಅವರ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಸಚಿವರು ಆಡಳಿತ ನಡೆಸಲು ಸಂಪೂರ್ಣ ನಿಷ್ಕ್ರಿಯರಾಗಿದ್ದು, ಮುಖ್ಯಮಂತ್ರಿಗಳು ಸಚಿವರ ರಾಜೀನಾಮೆ ಪಡೆಯಬೇಕು ಎಂದು ಮಾಜಿ ಶಾಸಕ ಪ್ರಸನ್ನಕುಮಾರ್ ಆಗ್ರಹಿಸಿದ್ದಾರೆ.
