ಹುಬ್ಬಳ್ಳಿ: ಗ್ರಾಮ ಪಂಚಾಯತವೊಂದರಲ್ಲಿ ಪತ್ನಿ ಅಧ್ಯಕ್ಷೆಯಾಗಿ ಪತಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿ ದಾಖಲೆ ಬರೆದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.
ಹುಬ್ಬಳ್ಳಿ ತಾಲೂಕಿನ ವರೂರು ಗ್ರಾಮ ಪಂಚಾಯತಿಯ ಸದಸ್ಯರಾಗಿ ದಂಪತಿ ಆಯ್ಕೆಯಾಗಿದ್ದರು. ಇದೀಗ ಅಧ್ಯಕ್ಷೆಯಾಗಿ ಪತ್ನಿ, ಉಪಾಧ್ಯಕ್ಷ ಸ್ಥಾನದಲ್ಲಿ ಪತಿ ಕಾರ್ಯನಿರ್ವಹಣೆ ಮಾಡಲಿದ್ದಾರೆ. ವಿಶಾಲಾಕ್ಷಿ ಚೆನ್ನಬಸನಗೌಡ ಹನಮಂತಗೌಡ್ರ ಅಧ್ಯಕ್ಷೆಯಾಗಿಯೂ, ಇವರ ಪತಿ ಚೆನ್ನಬಸಬನಗೌಡ ಹನಮಂತಗೌಡ್ರ ಉಪಾಧ್ಯಕ್ಷರಾಗಿಯೂ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ದಂಪತಿ ಆಯ್ಕೆ ಮಾಡಲು ವರೂರು ಹಾಗೂ ಕಂಪ್ಲಿಕೊಪ್ಪ ಗ್ರಾಮದ ಸ್ಥಳೀಯರು ಶ್ರಮಿಸಿದ್ದು, ಯಾವುದೇ ರೀತಿಯ ತೊಂದರೆಗಳಿಲ್ಲದೇ ಆಯ್ಕೆ ಪ್ರಕ್ರಿಯೆ ನಡೆದಿದೆ. ಪಂಚಾಯತಿಗೆ ಆಯ್ಕೆಯಾದ ನೂತನ ಸದಸ್ಯರು ಹಾಗೂ ಗ್ರಾಮಸ್ಥರು ಪಕ್ಷಾತೀತವಾಗಿ ಪತಿ- ಪತ್ನಿಯನ್ನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ್ದು, ಉತ್ತಮವಾಗಿ ಕಾರ್ಯ ನಿರ್ವಹಿಸುವಂತೆ ದಂಪತಿಯಿಂದ ಆಶಿಸುತ್ತಿದ್ದಾರೆ.