ಬೆಂಗಳೂರು: ಕಾಂಗ್ರೆಸ್ ಹಿರಿಯ ನೇತಾರ ದಿಗ್ವಿಜಯ್ ಸಿಂಗ್ ಅವರು, ಕಾಂಗ್ರೆಸ್ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಜಮ್ಮು- ಕಾಶ್ಮೀರಕ್ಕೆ 370ನೇ ವಿಧಿಯಡಿ ವಿಶೇಷ ಸ್ಥಾನಮಾನ ಕೊಡುವ ಮಾತನ್ನಾಡಿದ್ದಾರೆ. ಇದು ಕಾಂಗ್ರೆಸ್ ಟೂಲ್ಕಿಟ್ನ ಇನ್ನೊಂದು ಭಾಗವಾಗಿದೆ ಎಂದಿರುವ ರಾಜ್ಯ ಬಿಜೆಪಿ ಮುಖ್ಯ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು, ದಿಗ್ವಿಜಯ ಸಿಂಗ್ ಅವರ ಹೇಳಿಕೆಯನ್ನು ಪಕ್ಷವು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ.
ದೇಶದ ಪ್ರತಿಷ್ಠೆ ಮಣ್ಣು ಪಾಲು ಮಾಡುವುದು, ವಿಶ್ವವಂದ್ಯ ಪ್ರಧಾನಿಯವರ ಘನತೆಗೆ ಧಕ್ಕೆ ತರುವ ದುರುದ್ದೇಶ ಇದರ ಹಿಂದಿದೆ. ಟೂಲ್ಕಿಟ್ ವಿಷಯದಲ್ಲಿ ಈಗಾಗಲೇ ಬಿಜೆಪಿ, ಕಾಂಗ್ರೆಸ್ಸಿಗರ ದುರುದ್ದೇಶವನ್ನು ಜನರ ಗಮನಕ್ಕೆ ತಂದಿದೆ. ದಿಗ್ವಿಜಯ್ ಸಿಂಗ್ ಹೇಳಿಕೆಯಿಂದ ಆ ಪಕ್ಷವು ಚೀನಾ- ಪಾಕಿಸ್ತಾನದ ಜೊತೆ ನಿಂತಿರುವುದು ಸ್ಪಷ್ಟಗೊಳ್ಳುತ್ತದೆ. ಕಾಂಗ್ರೆಸ್ ಪಕ್ಷದ ಮುಖಂಡರು ಕ್ಲಬ್ಹೌಸ್ ಆ್ಯಪ್ ಮೂಲಕ ದೇಶವಿರೋಧಿ ಮಾತನ್ನಾಡುವ ನಾಚಿಗೆಗೆಟ್ಟ ಸಂದರ್ಶನ ನೀಡಿದ್ದು, ಆ ಪಕ್ಷವು ಪಾಕಿಸ್ತಾನದ ಪರ ಇರುವುದು ಸ್ಪಷ್ಟಗೊಳ್ಳುತ್ತಿದೆ. ಆದ್ದರಿಂದ ಕಾಂಗ್ರೆಸ್ಸಿನ ಹೆಸರನ್ನು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಐಎನ್ಸಿ) ಹೆಸರಿನ ಬದಲಾಗಿ ಆ್ಯಂಟಿ ನ್ಯಾಷನಲ್ ಕ್ಲಬ್ಹೌಸ್ ಎಂದು ಬದಲಿಸಿಕೊಳ್ಳಲಿ ಎಂದು ಅವರು ಒತ್ತಾಯಿಸಿದ್ದಾರೆ.
Advertisement
Advertisement
ದಿಗ್ವಿಜಯ್ ಸಿಂಗ್ ಅವರು ಈ ಹಿಂದೆ ಪುಲ್ವಾಮಾ ದಾಳಿ ಇದೇನೂ ಗಂಭೀರ ವಿಚಾರವಲ್ಲ ಎಂದು ಹೇಳಿ ಪಾಕಿಸ್ತಾನದ ಕ್ರಮವನ್ನೇ ಸಮರ್ಥಿಸಲು ಮುಂದಾಗಿದ್ದರು. ಇದು ಭಯೋತ್ಪಾದಕರ ದಾಳಿ ಎಂದು ಒಪ್ಪಿಕೊಳ್ಳಲು ಅವರು ಸಿದ್ಧರಿರಲಿಲ್ಲ. ವಿದೇಶದ ಮಾಧ್ಯಮ ಪ್ರತಿನಿಧಿ ಜೊತೆ ಸಂದರ್ಶನದಲ್ಲಿ “ನರೇಂದ್ರ ಮೋದಿ ಅವರ ಅಧಿಕಾರ ಕಳೆದುಕೊಂಡರೆ” ಎಂಬ ಊಹಾತ್ಮಕ ಪ್ರಶ್ನೆಗೆ ದಿಗ್ವಿಜಯ್ ಸಿಂಗ್ ಅವರು ಈ ಉತ್ತರ ನೀಡಿರುವುದು ಕಾಂಗ್ರೆಸ್ನ ಪಾಕ್ ಪರ- ಚೀನಾಪರ ನೀತಿಯ ಪ್ರತಿಬಿಂಬದಂತಿದೆ. ಅಲ್ಲದೆ, ಜಮ್ಮು ಕಾಶ್ಮೀರದಲ್ಲಿ ಶಾಂತಿಯುತ ವಾತಾವರಣ ಬೇಡ ಎಂಬುದರ ಪ್ರತೀಕದಂತಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Advertisement
Advertisement
ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಕ್ಕಿಳಿಸಬೇಕು ಮತ್ತು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಈ ಹಿಂದೆ ಕಾಂಗ್ರೆಸ್ ಮುಖಂಡರಾದ ಮಣಿಶಂಕರ್ ಅಯ್ಯರ್ ಅವರೂ ಪಾಕಿಸ್ತಾನದಲ್ಲಿ ಸಂದರ್ಶನವೊಂದರಲ್ಲಿ ತಿಳಿಸಿದ್ದರು. 2014ರಲ್ಲಿ ಅಯ್ಯರ್ ಅವರು ಈ ಸಂದರ್ಶನ ಕೊಟ್ಟಾಗ ಈ ಹೇಳಿಕೆ ಕೇಳಿ ಟಿ.ವಿ. ಆಂಕರ್ ಆತಂಕಗೊಂಡಿದ್ದರು. ಇದರಲ್ಲಿ ನಮ್ಮ ಪಾತ್ರ ಏನಿದೆ ಎಂಬ ಪ್ರಶ್ನೆ ಮುಂದಿಟ್ಟಿದ್ದರು. ಇದು ಕಾಂಗ್ರೆಸ್ಸಿಗರ ಷಡ್ಯಂತ್ರವಲ್ಲದೆ ಮತ್ತೇನು? ಪಾಕಿಸ್ತಾನ ಪರ ಕಾಂಗ್ರೆಸ್ ಇರುವುದಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಬೇಕೇ ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: 370ನೇ ವಿಧಿ ರದ್ದತಿ ಬಳಿಕ ಜಮ್ಮು ಕಾಶ್ಮೀರದಲ್ಲಿ ಶೇ.54ರಷ್ಟು ಉಗ್ರ ಚಟುವಟಿಕೆ ಇಳಿಕೆ
ಮಣಿಶಂಕರ್ ಅಯ್ಯರ್ ಅವರು ಈ ಹಿಂದೆ ಜಮ್ಮು ಕಾಶ್ಮೀರವನ್ನು ಅಫಘಾನಿಸ್ತಾನಕ್ಕೆ ಹೋಲಿಸಿದ್ದರು ಎಂಬುದೂ ಗಮನಾರ್ಹ. ರಾಹುಲ್ ಗಾಂಧಿ ಅವರೂ 370ನೇ ವಿಧಿ ರದ್ದತಿ ಬಹುದೊಡ್ಡ ಪ್ರಮಾದ ಎಂದು ಟ್ವೀಟ್ ಮಾಡಿದ್ದರು. 2019ರ ಆಗಸ್ಟ್ ನಲ್ಲಿ ಈ ಟ್ವೀಟ್ ಮಾಡಲಾಗಿತ್ತು. ಜಮ್ಮು ಕಾಶ್ಮೀರದಲ್ಲಿ ಸಾವಿರಾರು ಜನರ ಹತ್ಯೆ ಆಗಿದೆ, ಜಮ್ಮು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವವೇ ಇಲ್ಲ ಎಂದಿದ್ದರು. ಇದಾದ ಎರಡು ದಿನಗಳ ಬಳಿಕ ಪಾಕಿಸ್ತಾನದ ರಾಷ್ಟ್ರಾಧ್ಯಕ್ಷರಾದ ಇಮ್ರಾನ್ ಖಾನ್ ಅವರು ಈ ಕುರಿತು ವಿಶ್ವಸಂಸ್ಥೆಗೆ ಪತ್ರ ಬರೆದಿದ್ದರು, ಜಮ್ಮು ಕಾಶ್ಮೀರದ ಪರಿಸ್ಥಿತಿ ಚೆನ್ನಾಗಿಲ್ಲ ಎಂಬ ರಾಹುಲ್ ಗಾಂಧಿ ಅವರ ಟ್ವೀಟ್ ಅನ್ನೂ ಅವರು ಉಲ್ಲೇಖಿಸಿದ್ದರು. ಇದು ಪಾಕಿಸ್ತಾನ ಮತ್ತು ಕಾಂಗ್ರೆಸ್ ನಡುವಿನ ಗುಪ್ತ ಒಪ್ಪಂದಕ್ಕೆ ಸಾಕ್ಷಿ ಅಲ್ಲವೇ ಎಂದು ಅವರು ಕೇಳಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರ ನಮಗೆ ರಾಷ್ಟ್ರೀಯತೆಯ ಪ್ರಶ್ನೆ: ಅಮಿತ್ ಶಾ
ರಾಹುಲ್ ಗಾಂಧಿ ಅವರು ಕೋವಿಡ್ ಹೆಚ್ಚಳದ ಕುರಿತು 2020ರ ಫೆಬ್ರವರಿ 13ರಂದು ಟ್ವೀಟ್ನಲ್ಲಿ ಜಮ್ಮು -ಕಾಶ್ಮೀರವನ್ನು ಪಾಕಿಸ್ತಾನದ ಭಾಗ ಎಂದು ಭೂಪಟದಲ್ಲಿ ತೋರಿಸಿದ್ದರು. ಇದು ಕಾಂಗ್ರೆಸಿಗರ ದೇಶವಿರೋಧಿ ಚಿಂತನೆಯ ಭಾಗವಲ್ಲವೇ ಎಂದು ಅವರು ಪ್ರಶ್ನೆ ಮುಂದಿಟ್ಟಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿನ ನಿರ್ಬಂಧ ಹಿಂಪಡೆಯುವವರೆಗೆ ದ್ವಿಪಕ್ಷೀಯ ಮಾತುಕತೆ ಇಲ್ಲ- ಇಮ್ರಾನ್ ಖಾನ್