Connect with us

Chamarajanagar

ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಮಳೆ – ಕೊಡಗು ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್

Published

on

ಧಾರವಾಡ/ಮಡಿಕೇರಿ: ಕಳೆದ ಎರಡು ದಿನಗಳಿಂದ ಕೊಡಗು ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಕಾವೇರಿ ನದಿ ಪಾತ್ರದ ಜನರಲ್ಲಿ ಆತಂಕ ಮನೆ ಮಾಡಿದೆ. ಒಂದೆಡೆ ಕೊರೊನಾ ಭೀತಿ ಹಾಗೂ ಮತ್ತೊಂದೆಡೆ 2 ವರ್ಷದಿಂದ ಪ್ರಾಕೃತಿಕ ವಿಕೋಪದಿಂದ ನಲುಗಿಹೋಗಿದ್ದ ಕೊಡಗಿನಲ್ಲಿ ಮತ್ತೆ ಮಳೆ ಆರ್ಭಟ ಹೆಚ್ಚಾಗಿದ್ದು, ಸ್ಥಳೀಯರಲ್ಲಿ ಭೀತಿಯನ್ನು ಮೂಡಿಸಿದೆ. ಅಲ್ಲದೇ ಹಾರಂಗಿ ಜಲಾಶಯದಲ್ಲಿ ಒಳಹರಿವು ಹೆಚ್ಚಾಗಿದೆ.

ಕೊಡಗು ಜಿಲ್ಲೆಯಲ್ಲಿ ಅಲ್ಲಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ಹವಾಮಾನ ಇಲಾಖೆಯ ಮುನ್ಸೂಚನೆ ಮೇರೆಗೆ ಜಿಲ್ಲಾಡಳಿತ ಯಲ್ಲೋ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರೀ ಮಳೆ ಸಾಧ್ಯತೆ. ಜಿಲ್ಲೆಯಲ್ಲಿ ಮುಂಗಾರು ಚುರುಕಾಗಿದ್ದು, ಜಿಲ್ಲೆ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುವ ಸಂಭವಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಸಂಜೆಯಿಂದ ನಾಳೆವರೆಗೆ 115.6 ಮಿ.ಮೀಟರ್ ನಿಂದ 204.4 ಮಿ.ಮೀಟರ್ ಹಾಗೂ ನಂತರದ ದಿನಗಳಲ್ಲಿ 64.5 ಮಿ.ಮೀಟರ್ ನಿಂದ 115.5 ಮಿ.ಮೀಟರ್ ಪ್ರಮಾಣದ ಮಳೆ ಆಗಲಿದೆ ಎಂದು ತಿಳಿಸಿದೆ. ಅಲ್ಲದೇ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಿದೆ.

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಸಮಸ್ಯೆಗಳು ಎದುರಾದರೆ, ಜಿಲ್ಲಾಡಳಿತ ನೀಡಿರುವ ತುರ್ತು ದೂರವಾಣಿ ಸಂಖ್ಯೆ 08272-221077 ಸಂಪರ್ಕಿಸಲು ಜಿಲ್ಲಾಧಿಕಾರಿ ಅನೀಸ್ ಕೆ. ಜಾಯ್ ಮನವಿ ಮಾಡಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹಲವೆಡೆ ಬೆಳ್ಳಂಬೆಳಗ್ಗೆ ಮಳೆ ಆರಂಭವಾಗಿದ್ದು, ಸೋನೆ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಮಲೆನಾಡಿನಲ್ಲೂ ರಾತ್ರಿಯಿಂದ ಎಡಬಿಡದೆ ಧಾರಾಕಾರ ಮಳೆ ಮುಂದುವರಿದಿದ್ದು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ, ಕೊಪ್ಪ ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಭಾರೀ ಮಳೆ ಹಿನ್ನೆಲೆ ಮಲೆನಾಡಿನ ಕೆಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಧಾರಾಕಾರ ಮಳೆಯಿಂದ ತುಂಗಾ, ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ.

ಧಾರವಾಡ ಜಿಲ್ಲೆಯಲ್ಲಿ ಕಿಲ್ಲರ್ ಕೊರೊನಾ ರಣಕೇಕೆ ಹಾಕುತ್ತಿದೆ. ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿದೆ. ಹೀಗಾಗಿ ಕೊರೊನಾ ವೈರಸ್ ಹರಡುವುದನ್ನ ತಡೆಗಟ್ಟಲು ಜಿಲ್ಲಾಡಳಿತ ಲಾಕ್‍ಡೌನನ್ನು ಕಠಿಣಗೊಳಿಸಲು ಮುಂದಾಗಿದೆ. ಜನರು ಮಾತ್ರ ಧಾರಾಕಾರ ಮಳೆಯನ್ನು ಸಹ ಲೆಕ್ಕಿಸದೇ ಖರೀದಿ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ.

Click to comment

Leave a Reply

Your email address will not be published. Required fields are marked *