– ಐವರಿಗೆ ಮಾತ್ರ ವೇದಿಕೆ ಮೇಲೆ ಅವಕಾಶ
ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಸಿದ್ಧತೆ ಭರದಿಂದ ಸಾಗಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರಮುಖ ಗಣ್ಯರ ಪಟ್ಟಿಯನ್ನು ಸಹ ಮಾಡಿಕೊಳ್ಳಲಾಗಿದೆ. ಈ ಪ್ರಕಾರ ಆಗಸ್ಟ್ 5ರಂದು ನಡೆಯುವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಬೆಳಗ್ಗೆ 11.15ಕ್ಕೆ ಅಯೋಧ್ಯೆಗೆ ಆಗಮಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಮೂಲಗಳಿಂದ ಮಾಹಿತಿ ಲಭ್ಯವಾಗಿದ್ದು, ಪ್ರಧಾನಿ ಮೋದಿ ಬೆಳಗ್ಗೆ 11.15ಕ್ಕೆ ಅಯೋಧ್ಯೆಗೆ ಆಗಮಿಸಿ ಸುಮಾರು ಮೂರು ಗಂಟೆಗಳ ಸಮಯವನ್ನು ಕಳೆಯಲಿದ್ದು, ಮಧ್ಯಾಹ್ನ 2ಕ್ಕೆ ಮತ್ತೆ ದೆಹಲಿಗೆ ಮರಳಿದ್ದಾರೆ ಎನ್ನಲಾಗಿದೆ.
ಅಯೋಧ್ಯೆಗೆ ಆಗಮಿಸುತ್ತಿದ್ದಂತೆ ಹನುಮಾನ್ ಗರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದು, ನಂತರ ರಾಮ ಮಂದಿರದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮೋದಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಆಯೋಜಕರು ಈ ಕುರಿತು ಮಾಹಿತಿ ನೀಡಿದ್ದು, ಪ್ರಧಾನಿ ಮೋದಿ ಸೇರಿ ವೇದಿಕೆ ಮೇಲೆ ಐದು ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯಪಾಲೆ ಆನಂದಿಬೆನ್ ಪಟೇಲ್, ಆರ್‍ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹಾಗೂ ರಾಮ ಮಂದಿರ ಟ್ರಸ್ಟ್‍ನ ಮುಖ್ಯಸ್ಥ ಮಹಾಂತ್ ನೃತ್ಯಗೋಪಾಲ್ ದಾಸ್ ವೇದಿಕೆ ಮೇಲೆ ಉಪಸ್ಥಿತರಿರಲಿದ್ದಾರೆ ಎಂದಿದ್ದಾರೆ.
ಕಾರ್ಯಕ್ರಮಕ್ಕಾಗಿ ಸಿದ್ಧತೆಗಳು ಭರದಿಂದ ಸಾಗಿದ್ದು, ಉತ್ತರ ಪ್ರದೇಶ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಪೊಲೀಸ್ ಮುಖ್ಯಸ್ಥರು ಭೂಮಿ ಪೂಜೆ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಸಿದ್ಧತೆಗೆ ಅಗತ್ಯ ಕ್ರಮ ಕೈಗೊಂಡಿದ್ದಾರೆ.