ಹಿರಿಯ ಕವಿ ಡಾ. ಸಿದ್ದಲಿಂಗಯ್ಯ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

Public TV
1 Min Read
BSY Siddalingaiaha

ಬೆಂಗಳೂರು: ಹಿರಿಯ ಕವಿ ಡಾ. ಸಿದ್ದಲಿಂಗಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ದಲಿತರ ನೋವನ್ನು ಸಮರ್ಥವಾಗಿ ಅಕ್ಷರ ರೂಪಕ್ಕಿಳಿಸಿ, ಅವರನ್ನು ಜಾಗೃತಗೊಳಿಸಿದವರು ಡಾ. ಸಿದ್ದಲಿಂಗಯ್ಯ. ನೋವಿನ ಕೆಂಡವನ್ನೇ ಒಡಲೊಳಗಿರಿಸಿಕೊಂಡ ಅವರ ಕವನಗಳು ದಲಿತ ಚಳವಳಿಗೆ ಕಾವು ನೀಡಿತ್ತು. ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅವರು ನಾಡು-ನುಡಿಗೆ ಸಲ್ಲಿಸಿದ ಸೇವೆ ಅನನ್ಯವಾದುದು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.

siddalingaiah medium

ಅವರ ನಿಧನದಿಂದ ಸಾಮಾಜಿಕ ಕಳಕಳಿಯ ಅಪೂರ್ವ ಸಾಹಿತಿಯನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ. ಅವರ ಕುಟುಂಬ, ಅಭಿಮಾನಿ ಬಳಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಕೊರೊನಾ ಸೋಂಕು ತಗುಲಿದ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಿದ್ದಲಿಂಗಯ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದ್ರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ 4.45ರ ಸುಮಾರಿಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳದಿದ್ದಾರೆ.

Share This Article