ಕಾರವಾರ: ರಾಜ್ಯದಲ್ಲಿ ಇಂದಿನಿಂದ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾದ ಹಿನ್ನಲೆಯಲ್ಲಿ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅಧಿಕಾರಿಗಳ ಸಭೆ ನಡೆಸಿ ಅಕ್ರಮ ಗೋ ಸಾಗಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.
ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ಅಕ್ರಮ ಗೋ ಸಾಗಾಟ ಕಂಡುಬಂದಲ್ಲಿ ಪ್ರಕರಣ ದಾಖಲಾಗುತ್ತದೆ. ಅಕ್ರಮವಾಗಿ ಗೋವುಗಳನ್ನ ಸಾಗಿಸಿದವರ ಮೇಲೆ 50 ಸಾವಿರದಿಂದ 5 ಲಕ್ಷದವರೆಗೆ ದಂಡ ವಿಧಿಸಲಾಗುವುದು ಎಂದರು.
ಗೋರಕ್ಷಣೆ ಸಂಬಂಧ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಪ್ರಯತ್ನ ನಡೆದಿದೆ. ಗೋ ಸಂರಕ್ಷಣೆಗೆ ಎಲ್ಲರೂ ಸಹಕರಿಸಬೇಕು, ಗೋವುಗಳನ್ನ ಕಸಾಯಿಖಾನೆಗೆ ತೆಗೆದುಕೊಂಡು ಹೋಗುವುದು ಕಂಡುಬಂದರೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
ಕಾರವಾರ ಜಿಲ್ಲೆಯಲ್ಲಿ ಬೀಡಾಡಿ ದನಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಬೀಡಾಡಿ ದನಗಳನ್ನು ಗೋ ಶಾಲೆಗೆ ಕಳಿಸಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ. ಪ್ರತಿ ತಾಲೂಕಿನಲ್ಲಿ ಎರಡು ಗೋ ಶಾಲೆ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ, ಇನ್ನೂ ಹಕ್ಕಿ ಜ್ವರ, ಹಂದಿ ಜ್ವರದ ಬಗ್ಗೆ ಇಲಾಖೆ ಅಧಿಕಾರಿಗಳು ಅಲರ್ಟ್ ಆಗಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಚಿವರು ಮಾಹಿತಿ ನೀಡಿದರು.