ಅಗತ್ಯ ವಸ್ತುಗಳ ಖರೀದಿಗೆ ವಾಹನಗಳಲ್ಲಿ ಸಂಚರಿಸುವುದಕ್ಕೆ ನಿರ್ಬಂಧ- ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟ

Public TV
3 Min Read
lockdown

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕು ಹರಡುವುದನ್ನು ತಡೆಗಟ್ಟಲು ಲಾಕ್‍ಡೌನ್ ಮಾಡಲಾಗಿದೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ 50 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದು, ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೇ 10ರಿಂದ 14 ದಿನ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದೆ. ಲಾಕ್‍ಡೌನ್ ಪರಿಷ್ಕೃತ ಮಾರ್ಗಸೂಚಿಯನ್ನು ಸರ್ಕಾರ ಪ್ರಕಟಿಸಿದೆ.

ರಾಜ್ಯ ಸರ್ಕಾರವು ಕೋವಿಡ್ 19 ನಿಯಂತ್ರಣಕ್ಕಾಗಿ ಏಪ್ರಿಲ್ 26 ರಂದು ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಆದರೆ ಇದೀಗ ಸೋಂಕು ಹರಡುವುದನ್ನು ತಡೆಗಟ್ಟಲು ಇನ್ನಷ್ಟು ಕಟ್ಟುನಿಟ್ಟಿನ ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ಹೊಸ ಮಾರ್ಗಸೂಚಿಯು ಮೇ 10ರ ಬೆಳಗ್ಗೆ 6 ಗಂಟೆಯಿಂದ ಮೇ 24ರ ಬೆಳಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರಲಿದೆ.

 ಮಾರ್ಗಸೂಚಿಯಲ್ಲಿ ಏನಿದೆ..?
ಬಸ್, ಮೆಟ್ರೋ ರೈಲು ಸಂಚಾರ ಇರುವುದಿಲ್ಲ. ಈಗಾಗಲೇ ನಿಗದಿಯಾಗಿರುವ ವಿಮಾನ ಮತ್ತು ರೈಲುಗಳು ಸಂಚರಿಸಲಿವೆ. ಟ್ಯಾಕ್ಸಿ ಮತ್ತು ಆಟೋ ರಿಕ್ಷಾಗಳು ತುರ್ತು ಸಂದರ್ಭಗಳಲ್ಲಿ ಹಾಗೂ ಮಾರ್ಗಸೂಚಿಯಲ್ಲಿ ಅನುಮತಿಸಿದ ರೀತಿಯಲ್ಲಿ ಸಂಚರಿಸಲು ಅವಕಾಶವಿದೆ. ಈ ಮಾರ್ಗಸೂಚಿಯಲ್ಲಿ ಅನುಮತಿಸಿದ ಸಂದರ್ಭಗಳನ್ನು ಹೊರತು ಪಡಿಸಿ, ಸರ್ಕಾರಿ ಹಾಗೂ ಖಾಸಗಿ ಬಸ್‍ಗಳು ಹಾಗೂ ಇತರ ಪ್ರಯಾಣಿಕರ ವಾಹನಗಳ ಸಂಚಾರವನ್ನು ನಿಷೇಧಿಸಿದೆ. ಶಾಲೆ, ಕಾಲೇಜುಗಳು, ಶಿಕ್ಷಣ ಅಥವಾ ಕೋಚಿಂಗ್ ಸಂಸ್ಥೆಗಳ ತರಗತಿಗಳು ನಡೆಯುವುದಿಲ್ಲ.

vlcsnap 2021 05 07 20h27m49s945

ಹೋಟೆಲ್‍ಗಳು, ರೆಸ್ಟೋರೆಂಟ್ ಗಳು ಮತ್ತು ಆಹಾರ ಮಳಿಗೆಗಳು ಪಾರ್ಸೆಲ್ ಹಾಗೂ ಹೋಂ ಡೆಲಿವರಿ ಸೇವೆಗಳನ್ನು ಮಾತ್ರ ಒದಗಿಸಲು ಅನುಮತಿಸಲಾಗುವುದು. ಸಿನೆಮಾ ಹಾಲ್‍ಗಳು, ಶಾಪಿಂಗ್ ಮಾಲ್‍ಗಳು, ಜಿಮ್ನೇಸಿಯಂಗಳು, ಕ್ರೀಡಾ ಸಂಕೀರ್ಣಗಳು, ಕ್ರೀಡಾಂಗಣ, ಈಜುಕೊಳ, ಉದ್ಯಾನವನಗಳು, ಮನರಂಜನಾ ಪಾರ್ಕ್ ಗಳು, ಕ್ಲಬ್ ಗಳು, ಥಿಯೇಟರ್ ಗಳು, ಬಾರ್ ಗಳು ಮತ್ತು ಸಭಾಂಗಣ, ಸಮುದಾಯ ಭವನಗಳಂತಹ ಸ್ಥಳಗಳು ಮುಚ್ಚಲಿವೆ.

vlcsnap 2021 05 07 20h27m57s510

ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿ, ಧಾರ್ಮಿಕ ಕಾರ್ಯಕ್ರಮಗಳು ಮೊದಲಾದ ಹೆಚ್ಚಿನ ಜನ ಸೇರುವ ಕಾರ್ಯಕ್ರಮಗಳು, ಸಮಾವೇಶಗಳನ್ನು ನಿಷೇಧಿಸಲಾಗಿದೆ. ಎಲ್ಲ ಧಾರ್ಮಿಕ ಸ್ಥಳಗಳು ಅಥವಾ ಪೂಜಾ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

vlcsnap 2021 05 07 20h28m05s973

ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಗತ್ಯ ಸೇವೆ ನೀಡುವ ಕಚೇರಿಗಳು ಮಾತ್ರ ಕಾರ್ಯ ನಿರ್ವಹಿಸಲಿವೆ. ಆರೋಗ್ಯ ಸೇವಾ ಸೌಲಭ್ಯಗಳು ಮತ್ತು ಸಂಬಂಧಿತ ಸೇವೆಗಳಿಗೆ ಅವಕಾಶ ನೀಡಲಾಗುವುದು. ಎಲ್ಲ ಕೃಷಿ ಮತ್ತು ಪೂರಕ ಚಟುವಟಿಕೆಗಳು, ಮೀನುಗಾರಿಕೆ, ಕೋಳಿ ಸಾಕಾಣಿಕೆ, ಮಾಂಸ ಮತ್ತು ಹೈನುಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಅನುಮತಿ ನೀಡಲಾಗುವುದು.

vlcsnap 2021 05 07 20h28m12s872

ಎಲ್ಲ ಸರಕು ಸಾಗಾಣಿಕೆ ವಾಹನಗಳ ಮುಕ್ತ ಸಂಚಾರಕ್ಕೆ ಅನುಮತಿ ನೀಡಲಾಗುವುದು. ಸಾರ್ವಜನಿಕರ ಓಡಾಟವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ಕೆಲವು ವಿನಾಯಿತಿಗಳನ್ನು ಮಾತ್ರ ನೀಡಲಾಗಿದೆ. ಆಹಾರ ಸಾಮಗ್ರಿ, ದಿನಸಿ ವಸ್ತುಗಳು, ಹಣ್ಣು ಮತ್ತು ತರಕಾರಿ, ಮಾಂಸ ಮತ್ತು ಮೀನಿನ ಮಳಿಗೆಗಳು ಮತ್ತು ಪಶು ಆಹಾರದ ಮಳಿಗೆಗಳು ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ತೆರೆಯಲು ಅನುಮತಿಸಿದೆ. ಹಾಲಿನ ಬೂತ್ಗಳು ಹಾಗೂ ತಳ್ಳುಗಾಡಿಗಳಲ್ಲಿ ತರಕಾರಿ ಮಾರಾಟಕ್ಕೆ ಬೆಳಿಗ್ಗೆ 6 ರಿಂದ ಸಂಜೆ 6ರ ವರೆಗೆ ಅವಕಾಶವಿದೆ.

zsfdfgfgh

ನ್ಯಾಯಬೆಲೆ ಅಂಗಡಿಗಳು ತೆರೆಯಲಿವೆ. ಮದ್ಯ ಮಾರಾಟ ಮಳಿಗೆಗಳು ಕೇವಲ ಪಾರ್ಸೆಲ್ ಸೇವೆಗಾಗಿ ಬೆಳಿಗ್ಗೆ 6 ರಿಂದ 10ರ ವರೆಗೆ ತೆರೆಯಲಿವೆ. ಜನರು ಮನೆಯಿಂದ ಹೊರ ಬರುವುದನ್ನು ತಡೆಯುವ ನಿಟ್ಟಿನಲ್ಲಿ ದಿನದ 24 ಗಂಟೆಯೂ ಅಗತ್ಯ ವಸ್ತುಗಳ ಹೋಂ ಡೆಲಿವರಿ ಸೇವೆ ಒದಗಿಸುವುದನ್ನು ಉತ್ತೇಜಿಸಲಾಗುವುದು. ದೂರ ಸಂಪರ್ಕ, ಇಂಟರ್ ನೆಟ್ ಸೇವೆ, ಪ್ರಸಾರ ಮತ್ತು ಕೇಬಲ್ ಸೇವೆಗಳು ಲಭ್ಯವಾಗಲಿವೆ.

vlcsnap 2021 05 07 20h30m01s997

ಐಟಿ ಮತ್ತು ಐಟಿಇಎಸ್ ಕಂಪೆನಿಗಳ ಅಗತ್ಯ ಸಿಬ್ಬಂದಿ ಮಾತ್ರ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸಲು ಅವಕಾಶವಿದ್ದು, ಇತರ ಸಿಬ್ಬಂದಿ ಮನೆಯಿಂದಲೇ ಕಾರ್ಯನಿರ್ವಹಿಸಬೇಕು. ಸ್ಥಳದಲ್ಲಿಯೇ ಕಾರ್ಮಿಕರು ಅಥವಾ ಸಿಬ್ಬಂದಿ ಲಭ್ಯವಿರುವ ಕೈಗಾರಿಕೆಗಳು ಅಥವಾ ಉತ್ಪಾದನಾ ಘಟಕಗಳು ಕಾರ್ಯ ನಿರ್ವಹಿಸಬಹುದು.

vlcsnap 2021 05 07 20h29m58s881

ಅಗತ್ಯ ವಸ್ತುಗಳ ತಯಾರಿಕಾ ಘಟಕಗಳ ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗುವುದು. ನಿರಂತರ ಕಾರ್ಯನಿರ್ವಹಣೆಯ ಅಗತ್ಯವಿರುವ ತಯಾರಿಕಾ ಘಟಕಗಳಿಗೆ ಅನುಮತಿ ನೀಡಲಾಗುವುದು. ಸ್ಥಳದಲ್ಲಿಯೇ ಕಾರ್ಮಿಕರು, ಕೆಲಸಗಾರರನ್ನು ಹೊಂದಿರುವ ನಿರ್ಮಾಣ ಚಟುವಟಿಕೆಗಳಿಗೆ ಹಾಗೂ ರಸ್ತೆ ಕಾಮಗಾರಿಗಳಿಗೆ ಅನುಮತಿ ನೀಡಲಾಗುವುದು. ಅಂತ್ಯಸಂಸ್ಕಾರದಲ್ಲಿ ಗರಿಷ್ಠ 5 ಜನರಿಗೆ ಪಾಲ್ಗೊಳ್ಳಲು ಅವಕಾಶ, ಮದುವೆ ಸಮಾರಂಭಗಳಲ್ಲಿ ಗರಿಷ್ಠ 50 ಜನರಿಗೆ ಅವಕಾಶ ನೀಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *