ಲಕ್ನೋ: ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಖೇದ ವ್ಯಕ್ತಪಡಿಸಿದ್ದು, ಅತ್ಯಾಚಾರಿಗಳಿಗೆ ಕಠೋರ ಶಿಕ್ಷೆ ನೀಡಲಾಗುವುದು. ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಉತ್ತರ ಪ್ರದೇಶದಲ್ಲಿ ತಾಯಿ ಹಾಗೂ ಸಹೋದರಿಯರ ಘನತೆಗೆ ಧಕ್ಕೆಯುಂಟು ಮಾಡುವರನ್ನು ನಾಶ ಮಾಡಲಾಗುವುದು ಹಾಗೂ ಅಂತಹವರಿಗೆ ಅನುಕರಣೀಯ ರೀತಿ ಶಿಕ್ಷೆ ವಿಧಿಸಲಾಗುವುದು. ಅಲ್ಲದೆ ನಮ್ಮ ತಾಯಂದಿರು ಹಾಗೂ ಸಹೋದರಿಯರ ಗೌರವಕ್ಕೆ ಧಕ್ಕೆ ತರುವವರನ್ನು ಸರ್ವನಾಶ ಮಾಡಲಾಗುವುದು. ಭವಿಷ್ಯದಲ್ಲಿ ಮಾದರಿಯಾಗುವ ರೀತಿಯ ಶಿಕ್ಷೆಯನ್ನು ವಿಧಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ನಿಮ್ಮ ಯುಪಿ ಸರ್ಕಾರ ಪ್ರತಿಯೊಬ್ಬ ತಾಯಿ ಹಾಗೂ ಸಹೋದರಿಯರ ಸುರಕ್ಷತೆ ಮತ್ತು ಭದ್ರತೆಗೆ ಬದ್ಧವಾಗಿದೆ. ಇದು ನಮ್ಮ ಭರವಸೆ ಹಾಗೂ ದೃಢ ಸಂಕಲ್ಪವಾಗಿದೆ ಎಂದು ಯೋಗಿ ಆದಿತ್ಯನಾಥ್ ಅವರು ಹಿಂದಿಯಲ್ಲಿ ಟ್ವೀಟ್ ಮಾಡಿ ತಿಳಿಸಿದ್ದಾರೆ.
उत्तर प्रदेश में माताओं-बहनों के सम्मान-स्वाभिमान को क्षति पहुंचाने का विचार मात्र रखने वालों का समूल नाश सुनिश्चित है।
इन्हें ऐसा दंड मिलेगा जो भविष्य में उदाहरण प्रस्तुत करेगा।
आपकी @UPGovt प्रत्येक माता-बहन की सुरक्षा व विकास हेतु संकल्पबद्ध है।
यह हमारा संकल्प है-वचन है।
— Yogi Adityanath (@myogiadityanath) October 2, 2020
ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ತೃಣಮೂಲ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಯುಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದವು. ಅಲ್ಲದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಗುರುವಾರ ಹತ್ರಾಸ್‍ಗೆ ತೆರಳಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದು ಮರಳಿ ದೆಹಲಿಗೆ ಕರೆ ತಂದಿದ್ದರು. ಯುಪಿ ಅತ್ಯಾಚಾರ ಪ್ರಕರಣದ ಕುರಿತು ದೇಶಾದ್ಯಂತ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ಅವರು ಈ ಹೇಳಿಕೆ ನೀಡಿದ್ದಾರೆ.
ಗುರುವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಹ ಈ ಕುರಿತು ಆಕ್ರೋಶ ವ್ಯಕ್ತಪಡಿಸಿ, ಯೋಗಿಯ ಯುಪಿಯಲ್ಲಿ ದಲಿತರು, ಅಲ್ಪಸಂಖ್ಯಾತರಿಗೆ ಹಿಂಸೆ ನೀಡಲಾಗುತ್ತಿದೆ ಎಂದು ಕಿಡಿ ಕಾರಿದ್ದರು. ಹೀಗೆ ದೇಶಾದ್ಯಂತ ವಿವಿಧ ನಾಯಕರು ಹತ್ರಾಸ್ ಪ್ರಕರಣದ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದರು.