ಚಿತ್ರದುರ್ಗ: ಅಪಘಾತವಾಗಿ ರಸ್ತೆಯಲ್ಲಿ ನರಳುತ್ತಿದ್ದ ಅಪರಿಚಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿಸಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾನವೀಯತೆ ಮೆರೆದಿದ್ದಾರೆ.
ತಾಲೂಕಿನ ಸಿರಿಗೆರೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಾಳಾಗಿ ರಸ್ತೆ ಮಧ್ಯೆ ನರಳಾಡುತ್ತಿದ್ದರು. ಈ ವೇಳೆ ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಬಸವರಾಜ ಹೊರಟ್ಟಿಯವರು ರಸ್ತೆಯಲ್ಲಿ ನಡೆದ ಅಪಘಾತ ಗಮನಿಸಿ, ತಕ್ಷಣವೇ ಕಾರು ನಿಲ್ಲಿಸಿ ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳುಗಳ ಬಳಿಗೆ ಧಾವಿಸಿದ್ದಾರೆ. ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಹಾಗೂ ಪುತ್ರನಿಗೆ ಪ್ರಥಮ ಚಿಕಿತ್ಸೆ ಮಾಡಿಸಿ, ಕೆಲ ಕಾಲ ಸ್ಥಳದಲ್ಲೇ ಇದ್ದು, ಗಾಯಾಳುಗಳಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ. ನಂತರ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ.
ಅತಿ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿದರೆ ಇಂತಹ ಅವಘಡ ಸಂಭವಿಸುತ್ತದೆ. ಅದೇ ರೀತಿ ಈಗ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದರು. ಅಲ್ಲದೆ ಗಾಯಾಳುಗಳಿಗೆ ಸಾಂತ್ವಾನ ಹೇಳಿ ಅವರ ಪ್ರಯಾಣ ಮುಂದುವರೆಸಿದ್ದಾರೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.