– 2016ರಲ್ಲಿ ಶಿವಮೊಗ್ಗದಲ್ಲಿ ನಡೆದಿದ್ದ ಪ್ರಕರಣ
ಶಿವಮೊಗ್ಗ: ಅಪ್ರಾಪ್ತೆ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿ ಅರ್ಚಕನಿಗೆ 14 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ನಗರದ ಜೈಲು ರಸ್ತೆಯ ದುರ್ಗಾ ಪರಮೇಶ್ವರಿ ದೇವಾಲಯದ ಅರ್ಚಕನಾಗಿದ್ದ ಶಿವಕುಮಾರ್ ಕಳೆದ 2016ರಲ್ಲಿ ದೇವಸ್ಥಾನಕ್ಕೆ ಬರುತ್ತಿದ್ದ ಅಪ್ರಾಪ್ತೆ ಬಾಲಕಿಯನ್ನು ಆತ್ಯಾಚಾರ ಮಾಡಿದ್ದ. ನೀನು ಮಂಕಾಗಿದ್ದೀಯ, ಪರೀಕ್ಷೆಯಲ್ಲಿ ಹೆಚ್ಚು ಅಂಕ ತೆಗೆಯುವ ಹಾಗೆ ಪೂಜೆ ಮಾಡುತ್ತೇನೆಂದು ಆಮಿಷ ತೋರಿಸಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ.
ಅಪ್ರಾಪ್ತೆ ಹಾಗೂ ಆಕೆಯ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆಯನ್ನು ಮುಂದುವರೆಸಿದ್ದರು. ತನಿಖೆಯ ನಂತರ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಪೊಲೀಸರು ಸಲ್ಲಿಸಿದ್ದರು.
ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಮತ್ತು ಜಿಲ್ಲಾ ಸೆಷನ್ ನ್ಯಾಯಾಲಯದ ನ್ಯಾಯಾಧೀಶರಾದ ಶಿವಪ್ರಸಾದ್ ಅವರು ಶಿವಕುಮಾರ್‍ಗೆ 14 ವರ್ಷ ಕಠಿಣ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೇ ದಂಡದ ಹಣವನ್ನು ಸಂತ್ರಸ್ತೆ ಬಾಲಕಿಗೆ ನೀಡುವಂತೆ ಆದೇಶಿಸಿದ್ದಾರೆ. ಈ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಕೆ.ಎಸ್.ಸತೀಶ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.