– ಪ್ರವಾಸಿಗರಿಗೆ ನಿಷೇಧ ಹೇರಿದ ಜಿಲ್ಲಾಡಳಿತ
– ಇಂದು ಮಧ್ಯರಾತ್ರಿಯಿಂದಲೇ ಚಾಮುಂಡಿ ಬೆಟ್ಟಕ್ಕೆ ನಿಷೇಧ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2020 ಹಿನ್ನೆಲೆಯಲ್ಲಿ ಬಿಗಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದ್ದು, ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳ ಭೇಟಿಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.
ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಮೈಸೂರು ಅರಮನೆ, ಮೃಗಾಲಯಕ್ಕೆ 15 ದಿನಗಳ ಕಾಲ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಅಕ್ಟೋಬರ್ 17ರಿಂದ ನವೆಂಬರ್ 1ರವರೆಗೆ ಸಂಪೂರ್ಣ ನಿಷೇಧ ಮಾಡಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಇಂದು ಮಧ್ಯರಾತ್ರಿಯಿಂದಲೇ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.
ನಂಜನಗೂಡು ದೇವಾಲಯಕ್ಕೂ ಪ್ರವೇಶ ನಿಷೇಧ ಮಾಡಿದ್ದು, ಅಕ್ಟೋಬರ್ 17ರಿಂದ ನವೆಂಬರ್ 1ರವರೆಗೆ ಪ್ರವಾಸಿಗರು ಹೋಗುವಂತಿಲ್ಲ. ಮೈಸೂರಿನ ಜೊತೆಗೆ ಮಂಡ್ಯ ಪ್ರವಾಸಿ ತಾಣಗಳನ್ನು ಮುಚ್ಚಲಾಗುವುದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ. ಈ ಬಾರಿ ಸರಳ, ಸಾಂಪ್ರದಾಯಿಕ ಹಾಗೂ ವರ್ಚುವಲ್ ದಸರಾ ಮಾಡೋಣ ಎಂದು ಫೇಸ್‍ಬುಕ್ ಲೈವ್‍ನಲ್ಲಿ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಮೈಸೂರು ಜಿಲ್ಲೆ ಕೊರೊನಾ ಸೋಂಕಿನಲ್ಲಿ ರಾಜ್ಯದಲ್ಲೆ ಎರಡನೇ ಸ್ಥಾನದಲ್ಲಿದೆ. ಕೊರೊನಾ ಸಾವಿನ ಪ್ರಮಾಣ ಮೈಸೂರು ಜಿಲ್ಲೆಯಲ್ಲಿ ರಾಜ್ಯದ ಶೇಖಡ 10% ರಷ್ಟಿದೆ. ಹೀಗಾಗಿ ಕೊರೊನಾ ನಿಯಂತ್ರಣಕ್ಕೆ ಈ ಕ್ರಮಗಳು ಅನಿವಾರ್ಯವಾಗಿವೆ. ಸಾರ್ವಜನಿಕರು ತಮ್ಮ ಮನೆಯಲ್ಲೆ ಇದ್ದು ಈ ಬಾರಿ ದಸರಾ ಆಚರಿಸಲು ಸಹಕಾರ ನೀಡಬೇಕೆಂದು ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ.