– ಸಿಂಧನೂರಿನಲ್ಲಿ ವಾಸ್ತವ್ಯ ಹೂಡಲಿರುವ ಸಿಎಂ
ರಾಯಚೂರು: ಮಸ್ಕಿಯಲ್ಲಿ ಉಪಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗವಹಿಸಲಿರುವ ಬಿಜೆಪಿ ಬೃಹತ್ ಬಹಿರಂಗ ಸಮಾವೇಶಕ್ಕೆ ಅಂತಿಮ ಸಿದ್ಧತೆಗಳು ಭರದಿಂದ ಸಾಗಿವೆ. ಸಮಾವೇಶಕ್ಕೆ ಬೃಹತ್ ವೇದಿಕೆ ಸಜ್ಜಾಗಿದ್ದು ಪಕ್ಷದ ನಾಯಕರುಗಳ ದಂಡೇ ಮಸ್ಕಿಗೆ ಆಗಮಿಸಲಿದೆ.
ಇಂದು ಸಂಜೆ 4:10ಕ್ಕೆ ಜಿಲ್ಲೆಯ ಸಿಂಧನೂರಿನ ಸರ್ಕ್ಯೂಟ್ ಹೌಸ್ ಹೆಲಿಪ್ಯಾಡ್‍ಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಬಿಎಸ್‍ವೈ, ರಸ್ತೆಯ ಮೂಲಕ ಮಸ್ಕಿಗೆ ತೆರಳಲಿದ್ದಾರೆ. ಸಂಜೆ 4:50ಕ್ಕೆ ಜಿಲ್ಲಾ ಬಿಜೆಪಿಯಿಂದ ಆಯೋಜಿಸಿರುವ ಬಹಿರಂಗ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಸಿಂಧನೂರಿನಲ್ಲಿ ರಾತ್ರಿ ವಾಸ್ತವ್ಯ ಹೂಡಿ ಮಾರ್ಚ್ 21 ರ ಬೆಳಗ್ಗೆ 9:30ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ. ಬೃಹತ್ ಬಹಿರಂಗ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ಪರ ಯಡಿಯೂರಪ್ಪ ಮತಯಾಚಿಸಲಿದ್ದಾರೆ.
ಸಮಾವೇಶಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು ಕಾರ್ಯಕ್ರಮದಲ್ಲಿ ಸಿಎಂ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಡಿಸಿಎಂ ಗೋವಿಂದ ಕಾರಜೋಳ, ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಶ್ರೀರಾಮುಲು, ಕೆ.ಎಸ್.ಈಶ್ವರಪ್ಪ, ಮಸ್ಕಿ ಉಪಚುನಾವಣೆ ಉಸ್ತುವಾರಿ ಬಿ.ವೈ.ವಿಜಯೇಂದ್ರ, ರವಿಕುಮಾರ್ ಸೇರಿ ಇನ್ನೂ ಹಲವಾರು ಬಿಜೆಪಿ ಮುಖಂಡರು ಭಾಗವಹಿಸಲಿದ್ದಾರೆ.
ಮಸ್ಕಿ ಪಟ್ಟಣದ ಪೊಲೀಸ್ ಠಾಣೆ ಬಳಿಯ ಮೈದಾನದಲ್ಲಿ ಬೃಹತ್ ವೇದಿಕೆ ಸಜ್ಜಾಗಿದೆ. ಇದೇ ವೇದಿಕೆಯಲ್ಲಿ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ತಮ್ಮ ನೂರಾರು ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಬಹಿರಂಗ ಸಮಾವೇಶದಲ್ಲಿ 30 ಸಾವಿರ ಜನ ಸೇರುವ ನಿರೀಕ್ಷೆಯಿದೆ. ಕೋವಿಡ್ ನಿಯಮ ಪಾಲನೆ ಮಾಡಿ ಸಮಾವೇಶ ಮಾಡಲು ಸಿದ್ಧತೆ ಮಾಡಿಕೊಂಡಿರುವುದಾಗಿ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ತಿಳಿಸಿದ್ದಾರೆ.