ಮೈಸೂರು: ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ಎನ್.ಆರ್ ಮತ್ತು ಚಾಮರಾಜ ವಿಧಾನಸಭಾ ಕ್ಷೇತ್ರಗಳ ಹಲವು ಬಡಾವಣೆಗಳು ನಾಳೆಯಿಂದ ಒಂದು ವಾರ ಕಾಲ ಲಾಕ್ ಡೌನ್ ಆಗಲಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ಮೈಸೂರಿನ ಎನ್. ಆರ್, ಮಂಡಿ, ಉದಯಗಿರಿ ಹಾಗೂ ಲಷ್ಕರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಳೆಯಿಂದ ಒಂದು ವಾರಗಳ ಕಾಲ ಲಾಕ್‍ಡೌನ್ ಜಾರಿ ಮಾಡಲಾಗಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಜುಲೈ 24ರ ಬೆಳಿಗ್ಗೆ 6 ಗಂಟೆಯವರೆಗೆ ಲಾಕ್‍ಡೌನ್ ಜಾರಿಯಾಗಲಿದೆ.
ಹಾಲು, ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗುತ್ತದೆ. ಹೋಟೆಲ್ ಗಳಲ್ಲಿ ಪಾರ್ಸೆಲ್ ನೀಡಲು ಮಾತ್ರ ಅವಕಾಶವಿದ್ದು, ಈ ಮೊದಲೇ ನಿಗದಿಯಾಗಿರುವ ಮದುವೆ ಸಮಾರಂಭಗಳಲ್ಲಿ 50 ಜನರು ಮಾತ್ರ ಭಾಗಿಯಾಗಲು ಅನುಮತಿ ನೀಡಲಾಗುತ್ತದೆ.
ಒಂದು ವೇಳೆ ಅನಗತ್ಯವಾಗಿ ರಸ್ತೆಗಿಳಿದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.