ಬೆಂಗಳೂರು: ಮುಂದಿನ ಎರಡು ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಈಗಾಗಲೇ ಬೀದರ್, ರಾಯಚೂರು, ಕಲಬುರಗಿ, ಯಾದಗಿರಿ ಮತ್ತು ಬಳ್ಳಾರಿ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ವರುಣ ಆರ್ಭಟಿಸುತ್ತಿದ್ದಾನೆ. ಮಹಾ ಮಳೆಗೆ ಹಲವಾರು ರಸ್ತೆಗಳು ಕೊಚ್ಚಿ ಹೋಗಿವೆ. ಸೇತುವೆಗಳು ಮುಳುಗಡೆಯಾಗಿವೆ. ಅಪಾರ ಪ್ರಮಾಣದ ಬೆಳೆ ನಾಶವಾಗಿ ರೈತರು ಕಂಗಾಲಾಗಿದ್ದಾರೆ. ಇದರ ನಡುವೆ ಮತ್ತೆ ಮಹಾಮಳೆಯಾಗುವ ಸೂಚನೆಯನ್ನು ಇಲಾಖೆ ನೀಡಿದೆ.
Advertisement
Advertisement
ನಾಳೆ ಮತ್ತು ನಾಡಿದ್ದು, ಕರ್ನಾಟಕದಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗ ಮತ್ತೆ ಕರಾವಳಿ ಭಾಗ, ಬಳ್ಳಾರಿ, ಧಾರವಾಡ ಮತ್ತು ಚಿಕ್ಕಮಗಳೂರಿನಲ್ಲಿ ಮಳೆಯಾಗಲಿದ್ದು, ಈ ಜಿಲ್ಲೆಗಳಿಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
Advertisement
Advertisement
ಈಗಾಗಲೇ ಸುರಿಯುತ್ತಿರುವ ಮಳೆಗೆ ಕಲಬುರಗಿಯ ಅಫಜಲಪುರ, ಆಳಂದ, ಚಿಂಚೋಳಿಯ ಹಲವು ಗ್ರಾಮಗಳು ಜಲಾವೃತವಾಗಿವೆ. ಕಾಳಗಿ ತಾಲೂಕಿನ ನೀಲಕಂಠೇಶ್ವರ ದೇಗುಲ ಮುಳುಗಿದೆ. ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣ ಸಹ ಸಂಪೂರ್ಣ ಜಲಾವೃತವಾಗಿದೆ. ಕಾಗಿಣಾ ನದಿ ಅಪಾಯಮಟ್ಟ ಮೀರಿದೆ. ಕಲಬುರಗಿ-ಸೇಡಂ ರಸ್ತೆ ಸಂಚಾರ ಸ್ಥಗಿತವಾಗಿದೆ.
ಅತ್ತ ಗಡಿಜಿಲ್ಲೆ ಬೀದರಿನ ಔರಾದ್, ಬಸವಕಲ್ಯಾಣ ತಾಲೂಕಿನ ಹಲವು ಗ್ರಾಮಗಳು ಜಲಾವೃತವಾಗಿವೆ. ಭಾಲ್ಕಿ ತಾಲೂಕಿನ ಜಮಖಂಡಿ ಗ್ರಾಮದ ಬಳಿ ಸೇತುವೆ ದಾಟುವಾಗ ಕೋಳಿ ಆಹಾರ ಸಾಗಿಸುತ್ತಿದ್ದ ಲಾರಿ ನೀರು ಪಾಲಾಗಿದೆ. ರಾಯಚೂರು ಜಿಲ್ಲೆ ಇಡಪನೂರು, ಮಿಡಗಲದಿನ್ನಿ ಗ್ರಾಮ ಮುಳುಗಡೆಯಾಗಿದೆ. ಸತತ ಮಳೆಯಿಂದ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಇತ್ತ ಯಾದಗಿರಿ ಜಿಲ್ಲೆಯಲ್ಲೂ ಮಳೆಯ ಅಬ್ಬರ ಮುಂದುವರಿದಿದೆ. ಮುಂಗಿ ಹಳ್ಳ ಉಕ್ಕಿ ಹರಿಯುತ್ತಿದ್ದು, ಬಾಚ್ವಾರ ಗ್ರಾಮದ ಸಂಪರ್ಕ ಕಡಿತವಾಗಿದೆ.