ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‍ಡಿಎಂ) ಕಾಲೇಜಿನ ಹಿರಿಯ ವಿದ್ಯಾರ್ಥಿನಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮೃತರನ್ನು ಶ್ರೇಯಾ ರೈ ಎಂದು ಗುರುತಿಸಲಾಗಿದ್ದು, ಈಕೆ 7 ತಿಂಗಳ ಗರ್ಭಿಣಿಯಾಗಿದ್ದರು. ಪ್ರಸ್ತುತ ದುಬೈನಲ್ಲಿ ವಾಸವಾಗಿರುವ ಶ್ರೇಯಾರಿಗೆ ಕೆಲ ದಿನಗಳ ಹಿಂದೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಕೂಡಲೇ ಅವರು ದುಬೈನಲ್ಲಿರುವ ಪ್ರಸಿದ್ಧ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ದಿನಗಳೆದಂತೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗುತ್ತಾ ಬಂದಿದ್ದು, ಇಂದು ಬೆಳಗ್ಗಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿರುವುದಾಗಿ ಸಂಬಂಧಿಕರು ತಿಳಿಸಿದ್ದಾರೆ.
ಚಿಕ್ಕಮಗಳೂರು ಕಳಸ ಮೂಲದ ಶ್ರೇಯಾ, ತಮ್ಮ ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಎಸ್‍ಡಿಎಂ ಕಾಲೇಜಿನಲ್ಲಿ ಮುಗಿಸಿದ್ದಾರೆ. ಬಳಿಕ ಪಡುಬಿದ್ರಿ ಮೂಲ ಪವನ್ ಶೆಟ್ಟಿಯನ್ನು ವರಿಸಿದ್ದ ಶ್ರೇಯಾ ಆ ನಂತರ ಪತಿಯೊಂದಿಗೆ ದುಬೈನಲ್ಲಿ ನೆಲೆಸಿದ್ದರು.