ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮತ್ತೆ ಇಬ್ಬರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಇಂದಿನಿಂದ ಕೆಲ ದಿನಗಳ ಕಾಲ ಮನೆಯಲ್ಲಿ ಉಳಿಯಲು ತೀರ್ಮಾನ ಮಾಡಿದ್ದಾರೆ.
ಸಿಎಂ ಯಡಿಯೂರಪ್ಪ ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಗೃಹ ಕಚೇರಿ ಕೃಷ್ಣಾದಲ್ಲಿ ಕೆಲ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದಿರುವ ಕಾರಣ ಇಂದಿನಿಂದ ಕೆಲ ದಿನಗಳ ಕಾಲ ಮನೆಯಿಂದಲೇ ನನ್ನ ಕರ್ತವ್ಯಗಳನ್ನು ನಿರ್ವಹಿಸಲಿದ್ದೇನೆ. ವೀಡಿಯೋ ಕಾನ್ಫರೆನ್ಸ್ ಮುಖಾಂತರ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಿದ್ದೇನೆ ಎಂದು ತಿಳಿಸಿದ್ದಾರೆ.
ಯಾರೂ ಆತಂಕ ಪಡುವ ಅಗತ್ಯವಿಲ್ಲ ನಾನು ಆರೋಗ್ಯವಾಗಿದ್ದೇನೆ. ಎಲ್ಲರೂ ಮುನ್ನೆಚ್ಚರಿಕೆಯ ಕ್ರಮಗಳು ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ. ಸಾಮಾಜಿಕ ಅಂತರ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ ಎಂದು ಸೆಲ್ಫ್ ಕ್ವಾರಂಟೈನ್ ಬಗ್ಗೆ ಸಿಎಂ ಯಡಿಯೂರಪ್ಪ ಅಧಿಕೃತವಾಗಿ ಪ್ರಕಟಿಸಿದ್ದಾರೆ.
ಸಿಎಂ ಅವರ ಗೃಹ ಕಚೇರಿ ಕೃಷ್ಣಾ, ಸರ್ಕಾರಿ ನಿವಾಸ ಕಾವೇರಿ ಮತ್ತು ಅಧಿಕೃತ ನಿವಾಸ ಧವಳಗಿರಿಯಲ್ಲಿರುವ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈಗಾಗಲೇ ಸಿಎಂ ಕಾವೇರಿ ನಿವಾಸಕ್ಕೆ ಬಿಬಿಎಂಪಿ ಸಿಬ್ಬಂದಿ ಸ್ಯಾನಿಟೈಸ್ ಮಾಡುತ್ತಿದ್ದಾರೆ. ಕಾವೇರಿ ನಿವಾಸದ ಮುಖ್ಯ ಗೇಟ್, ಮನೆ, ಹಾಗೂ ಗೃಹ ಕಚೇರಿ ಕೃಷ್ಣಾಗೆ ಸ್ಯಾನಿಟೈಸ್ ಮಾಡುತ್ತಿದ್ದಾರೆ.