– ಎರಡು ದಿನಗಳ ಹಿಂದಷ್ಟೇ ಪತ್ನಿ ತವರಿಗೆ ಕಳಿಸಿದ್ದ ಅಧಿಕಾರಿ
– ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ
ಬಳ್ಳಾರಿ: ಅರಣ್ಯಾಧಿಕಾರಿಯೊಬ್ಬರು ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರು ಆಘಾತಕಾರಿ ಘಟನೆ ನಡೆದಿದೆ.
ಜಿಲ್ಲೆಯ ಸಂಡೂರು ತಾಲೂಕಿನಲ್ಲಿ ವಲಯ ಅರಣ್ಯಾಧಿಕಾರಿಯಾಗಿದ್ದ ಬಸವರಾಜ ವೀರಾಪೂರ(31) ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸವರಾಜ ವೀರಾಪೂರ ಮೂಲತಃ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಮಾಪೂರ ಗ್ರಾಮದವರು. ಸಂಡೂರು ತಾಲೂಕಿನಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ತಾವು ವಾಸಿಸುತ್ತಿದ್ದ ಮನೆಯಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಳೆದ ಒಂದು ತಿಂಗಳ ಹಿಂದೆಯಷ್ಟೇ ಮದುವೆ ಮಾಡಿಕೊಂಡಿದ್ದ ಬಸವರಾಜ, ಕಳೆದ ಎರಡು ದಿನಗಳ ಹಿಂದೆ ತಮ್ಮ ಪತ್ನಿಯನ್ನು ತವರು ಮನೆಗೆ ಕಳುಹಿಸಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದು, ಈ ಬಗ್ಗೆ ಸಂಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತಿದ್ದಾರೆ.