ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಆಗ್ತಿದೆ. ಉಡುಪಿ ಜಿಲ್ಲೆಯಲ್ಲಿ ಧಾರಕಾರ ಮಳೆಯಾಗುತ್ತಿದೆ. ಕಾಲುವೆಗಳೆಲ್ಲಾ ತುಂಬಿ ರಸ್ತೆಗಳಲ್ಲಿ ಮಳೆ ನೀರು ಹರಿಯುತ್ತಿದೆ. ಕಳೆದ ರಾತ್ರಿ ಕಾರ್ಕಳ, ಕುಂದಾಪುರ ತಾಲೂಕಿನಲ್ಲಿ ಭಾರೀ ಮಳೆಯಾಗಿದ್ದು ನದಿಗಳು ತುಂಬಲು ಶುರುವಾಗಿವೆ.
ದಕ್ಷಿಣ ಕನ್ನಡದ ಸುಬ್ರಹ್ಮಣ್ಯ, ಪುತ್ತೂರು, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಳೆ ಮುಂದುವರಿದಿದ್ದು, ನೇತ್ರಾವತಿ ಮತ್ತು ಕುಮಾರಧಾರಾ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ಮಧ್ಯೆ ಚಾರ್ಮಾಡಿ ಘಾಟ್‍ನಲ್ಲಿ ವಾಹನ ನಿಲುಗಡೆ ನಿಷೇಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಅಪಾಯಕಾರಿ ಸ್ಥಳಗಳಲ್ಲಿ ಜನರ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ನಾಳೆಯವರೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮಂಗಳೂರು ನಗರದಲ್ಲೂ ಭಾರೀ ಮಳೆಯಾಗುತ್ತಿದ್ದು, ದ್ವಿಚಕ್ರ ವಾಹನ ಸವಾರರು ಮಳೆಗೆ ಹೈರಾಣಾಗಿದ್ದಾರೆ. ಭಾರೀ ಮಳೆಯಿಂದ ರಸ್ತೆ ತುಂಬೆಲ್ಲಾ ನೀರು ತುಂಬಿ ವಾಹನ ಸವಾರರು ಪರದಾಡುವಂತಾಯಿತು. ಪಶ್ಚಿಮ ಘಟ್ಟ ಪ್ರದೇಶದಲ್ಲೂ ಭಾರೀ ಮಳೆ ಸುರಿಯುತ್ತಿರುವ ಕಾರಣ, ನೇತ್ರಾವತಿ, ಕುಮಾರಾಧಾರಾ, ಮಂಗಳೂರಿನ ಫಲ್ಗುಣಿ ನದಿಯಲ್ಲೂ ನೀರಿನ ಹರಿವು ಜಾಸ್ತಿಯಾಗಿದೆ. ಇನ್ನೂ ಎರಡು ದಿನಗಳ ಭಾರೀ ಗಾಳಿ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಜನರಿಗೆ ಸೂಚಿಸಿದೆ.
ಗದಗ ಜಿಲ್ಲೆಯ ಹಲವೆಡೆ ವರುಣದೇವ ಅಬ್ಬರಿಸಿದ್ದು, ಒಂದು ಗಂಟೆಗೂ ಅಧಿಕ ಕಾಲ ಮಳೆಯಾಗಿದೆ. ಮಳೆ ಇಲ್ಲದೇ ಕಂಗೆಟ್ಟಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಇತ್ತ ಬೆಂಗಳೂರಿನ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಶುಕ್ರವಾರ ಸಂಜೆ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗಿತ್ತು. ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುಂದುವರೆದಿದೆ. ಮುಂಬೈನ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದೆ. ಮುಂಬೈ, ಥಾಣೆ ರತ್ನಗಿರಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಪ್ರಕಟಿಸಲಾಗಿದೆ.
https://www.facebook.com/publictv/videos/297544111602164/