– ಬಿಜೆಪಿ ಎದುರಿಸಲು ಪ್ರಾದೇಶಿಕ ಪಕ್ಷಗಳ ಮೈತ್ರಿ
– ಕಾಂಗ್ರೆಸ್ ದೇಶದಲ್ಲಿ ಅಪ್ರಸ್ತುತ
ಮೈಸೂರು: ಬಿಜೆಪಿ ವಿರುದ್ಧ ಒಂದಾಗಲು ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಕರೆದ ಸಭೆಗೆ ನಾನು ಹೋಗುತ್ತಿದ್ದೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ಅಪ್ರಸ್ತುತವಾಗಿದ್ದು, ಅವರೇ ವೇದಿಕೆಯನ್ನು ನಿರ್ಮಾಣ ಮಾಡಿಕೊಟ್ಟಿದ್ದಾರೆ. ಬಿಜೆಪಿಗೆ ಪರ್ಯಾಯವಾಗಲು ಪ್ರಾದೇಶಿಕ ಪಕ್ಷಗಳು ಒಂದಾಗಬೇಕು ಎಂಬ ನಿಟ್ಟಿನಲ್ಲಿ ಚಂದ್ರಶೇಖರ್ ರಾವ್ ಮುಂದೆ ಸಭೆ ನಡೆಸಲಿದ್ದಾರೆ. ನನ್ನ ಜೊತೆ ಕೆಸಿಆರ್ ಕರೆ ಮಾಡಿ ಮಾತನಾಡಿದ್ದು ನಾನು ಸಭೆಯಲ್ಲಿ ಭಾಗವಹಿಸುತ್ತೇನೆ ಎಂದು ಹೇಳಿದರು.
ಏನಿದು ಒಕ್ಕೂಟ?
ತೆಲಂಗಾಣದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಬಿಜೆಪಿಯನ್ನು ಸೋಲಿಸಲು ಪ್ರಾದೇಶಿಕ ಪಕ್ಷಗಳನ್ನು ಸೇರಿಸಿ ಒಕ್ಕೂಟ ರಚಿಸಲು ಮುಂದಾಗಿದ್ದಾರೆ.
ಈಗಾಗಲೇ ಕೆಸಿಆರ್ ದೇಶದ ವಿವಿಧ ರಾಜ್ಯಗಳಲ್ಲಿ ಇರುವ ಪ್ರಾದೇಶಿಕ ಪಕ್ಷಗಳ ನಾಯಕರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದು ಡಿಸೆಂಬರ್‌ನಲ್ಲಿ ತೆಲಂಗಾಣದಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಎಲ್ಲ ನಾಯಕರು ಭಾಗವಹಿಸುವಂತೆ ಆಹ್ವಾನ ನೀಡಿದ್ದಾರೆ.
ಯಾರಿಗೆಲ್ಲ ಆಹ್ವಾನ?
ಎನ್‍ಸಿಪಿ ನಾಯಕ ಶರದ್ ಪವಾರ್, ತೃಣಮೂಲ ಕಾಂಗ್ರೆಸ್ ನಾಯಕಿ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಬಿಎಸ್‍ಪಿ ನಾಯಕಿ ಮಾಯಾವತಿ, ಶಿರೋಮಣಿ ಅಕಾಲಿ ದಳದ ಪ್ರಕಾಶ್ ಸಿಂಗ್ ಬಾದಲ್, ಬಿಜೆಡಿಯ ನವೀನ್ ಪಟ್ನಾಯಕ್, ಡಿಎಂಕೆ ಸ್ಟಾಲೀನ್ ಅವರಿಗೆ ಆಹ್ವಾನ ನೀಡಲಾಗಿದೆ.ಈ ಪಕ್ಷಗಳ ನಾಯಕರು ಮಾತ್ರವಲ್ಲದೇ ಇನ್ನೂ ಅನೇಕ ರಾಜಕೀಯ ಪಕ್ಷಗಳು ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.
ಮೈತ್ರಿಕೂಟ ಯಾಕೆ?
ಬಿಹಾರದಲ್ಲಿ ಬಿಜೆಪಿ ಜೊತೆಗೂಡಿ ಜೆಡಿಯು ಮತ್ತೆ ಅಧಿಕಾರಕ್ಕೆ ಏರಿದ ಜೊತೆಗೆ ದೇಶದ 59 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ 41ರಲ್ಲಿ ಗೆಲುವು ಸಾಧಿಸಿದೆ. ಇಷ್ಟೇ ಅಲ್ಲದೇ ತೆಲಂಗಾಣ ಉಪ ಚುನಾವಣೆಯಲ್ಲೂ ಬಿಜೆಪಿ ಜಯಗಳಿಸಿದ ಬಳಿಕ ಮೈತ್ರಿಕೂಟ ರಚಿಸಲು ಕೆಸಿಆರ್ ಆಸಕ್ತಿ ವಹಿಸಿದ್ದಾರೆ.
ತೆಲಂಗಾಣದ ದುಬ್ಬಕ್ಕ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ ರಘುನಂದನ್ ರಾವ್ ಟಿಆರ್‌ಎಸ್ ಅಭ್ಯರ್ಥಿ ವಿರುದ್ಧ 1,079 ಮತಗಳ ಅಂತರದಿಂದ ಜಯಗಳಿಸಿದ್ದರು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಟಿಆರ್‌ಎಸ್ ಮಧ್ಯೆ ಸ್ಪರ್ಧೆ ನಡೆಯಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಫಲಿತಾಂಶದ ದಿನ ಬಿಜೆಪಿ ಅಭ್ಯರ್ಥಿಗೆ ಕೊನೆಯಲ್ಲಿ ಮುನ್ನಡೆ ಸಿಕ್ಕಿದ ಪರಿಣಾಮ ಜಯಗಳಿಸಿದ್ದರು.
ಈ ಚುನಾವಣೆಯ ಬಳಿಕ ಹೈದರಾಬಾದ್ ಪಾಲಿಕೆ ಚುನಾವಣೆಯಲ್ಲೂ ಬಿಜೆಪಿ ಭರ್ಜರಿ ಸಾಧನೆ ಮಾಡಿದೆ.150 ವಾರ್ಡ್‍ಗಳ ಪೈಕಿ 49ರಲ್ಲಿ ಬಿಜೆಪಿ ಜಯ ಸಾಧಿಸಿದೆ. ಸಿಎಂ ಚಂದ್ರಶೇಖರ್ ರಾವ್ ಅವರ ಟಿಆರ್‌ಎಸ್ 55, ಅಸಾದುದ್ದೀನ್ ಒವೈಸಿಯ ಎಐಎಂಎಂ 44 ವಾರ್ಡ್‌ಗಳನ್ನು ಗೆದ್ದುಕೊಂಡರೆ ಕಾಂಗ್ರೆಸ್ 2 ಸ್ಥಾನಗಳನ್ನು ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಈ ಸಾಧನೆಯೊಂದಿಗೆ ದಕ್ಷಿಣ ಭಾರತದಲ್ಲಿ ಕರ್ನಾಟಕ ಬಳಿಕ ತೆಲಂಗಾಣದಲ್ಲಿ ಅಧಿಕಾರ ಹಿಡಿಯಲು ಮಾಡಿದ ಮೊದಲ ದೊಡ್ಡ ಪ್ರಯತ್ನ ಫಲ ನೀಡಿದೆ.
ದಿನೇ ದಿನೇ ನೆಲೆ ಇಲ್ಲದ ರಾಜ್ಯದಲ್ಲಿ ಬಿಜೆಪಿ ಸಂಘಟನೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೊರತಾದ ಪಕ್ಷಗಳ ಜೊತೆ ಮೈತ್ರಿ ಮಾಡಲು ಕೆಸಿಆರ್ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಪ್ರಾದೇಶಿಕ ಪಕ್ಷಗಳ ಜೊತೆ ಮಾತುಕತೆ ನಡೆಸಲು ಈ ತಿಂಗಳಿನಲ್ಲೇ ಸಭೆ ನಡೆಸಲಿದ್ದಾರೆ.