– ಹಕ್ಕಿ ಜ್ವರ ನಿಯಂತ್ರಣಕ್ಕೆ ರಾಜ್ಯಮಟ್ಟದ ಉನ್ನತ ಸಮಿತಿ
ಬೆಂಗಳೂರು: ಹಕ್ಕಿ ಜ್ವರದ ಬಗ್ಗೆ ತೀವ್ರ ನಿಗಾ ವಹಿಸಲಾಗಿದ್ದು, ರಾಜ್ಯದಲ್ಲಿ ಕೋಳಿ ಮೊಟ್ಟೆ, ಮಾಂಸ ಮಾರಾಟಕ್ಕೆ ನಿರ್ಬಂಧವಿಲ್ಲ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಸ್ಪಷ್ಟಪಡಿಸಿದ್ದಾರೆ.
ಇಂದು ಆನ್‍ಲೈನ್ ಮೂಲಕ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಹಕ್ಕಿ ಜ್ವರದ ಬಗ್ಗೆ ತೀವ್ರ ನಿಗಾವಹಿಸುವಂತೆ ಸಚಿವರು ಸೂಚಿಸಿದ್ದಾರೆ.
Advertisement
Advertisement
ರಾಜ್ಯದಲ್ಲಿ ಇಲ್ಲಿಯವರೆಗೆ ಯಾವುದೇ ಹಕ್ಕಿಜ್ವರ ಪ್ರಕರಣ ಕಂಡುಬಂದಿಲ್ಲ. ಆದರೂ ಇಲಾಖೆಯ ಅಧಿಕಾರಿಗಳು ಹೆಚ್ಚು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಸಾರ್ವಜನಿಕರು ಆತಂಕ ಪಡದೆ ಮೊಟ್ಟೆ ಮತ್ತು ಮಾಂಸವನ್ನು ಸೇವಿಸಬಹುದಾಗಿದೆ. ಕೇರಳ ಹೊರತುಪಡಿಸಿ ಇತರೇ ರಾಜ್ಯಗಳಿಗೆ ಕೋಳಿ ಮತ್ತು ಕೋಳಿ ಉತ್ಪನ್ನಗಳ ಮಾರಾಟ ಹಾಗೂ ಸಾಗಾಣಿಕೆಗೆ ಯಾವುದೇ ನಿರ್ಬಂಧ ಇಲ್ಲ. ಕೇರಳದಿಂದ ಬರುವ ಕೋಳಿ, ಕುಕ್ಕುಟ, ಕೋಳಿ ಉತ್ಪನ್ನಗಳ ಸಾಗಾಣಿಕೆಯನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
Advertisement
Advertisement
ಗಡಿ ಭಾಗದಲ್ಲಿ ಹೈ ಅಲರ್ಟ್
ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಜಿಲ್ಲೆಗಳು ಹಾಗೂ ಇತರೇ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಹಕ್ಕಿ ಜ್ವರ ತಡೆಗಟ್ಟಲು ರೋಗ ನಿಯಂತ್ರಣ ಸಮಿತಿ ಸಭೆಗಳನ್ನು ನಡೆಸಿ ಮುಂಜಾಗೃತಾ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಅರಣ್ಯ ಇಲಾಖೆ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಹಾಗೂ ಪೊಲೀಸ್ ಇಲಾಖೆ ಜೊತೆಗೂಡಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ತಿಳಿಸಲಾಗಿದೆ. ಎಲ್ಲ ಕೋಳಿ ಫಾರಂಗಳಲ್ಲಿ ಮುಂಜಾಗೃತಾ ಕ್ರಮವಾಗಿ ರೋಗ ನಿಯಂತ್ರಣ ಔಷಧಿಗಳಿಂದ ಸ್ವಚ್ಛಗೊಳಿಸುವುದು ಮತ್ತು ಕನಿಷ್ಟ ಜೈವಿಕ ರಕ್ಷಣಾ ಪದ್ಧತಿ ಅಳವಡಿಕೊಳ್ಳುವಂತೆ ತೀರ್ಮಾನಿಸಿ ಕ್ರಮವಹಿಸುವಂತೆ ತಿಳಿಸಲಾಗಿದೆ ಎಂದರು.
ಕೇರಳದ ಗಡಿ ಭಾಗದ ಜಿಲ್ಲೆಗಳಾದ ಮೈಸೂರು, ದಕ್ಷಿಣ ಕನ್ನಡ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಕಾಡು ಹಕ್ಕಿಗಳು, ನೀರು ಹಕ್ಕಿಗಳು, ವಲಸೆ ಹಕ್ಕಿಗಳು ಬಾತುಕೋಳಿಗಳು, ಗೀಜಗದ ಹಕ್ಕಿಗಳು ಇತ್ಯಾದಿ ವಿವಿಧ ಪ್ರಭೇದದ ಹಕ್ಕಿಗಳ ಅಸಹಜ ಸಾವು ಅಥವಾ ಹಕ್ಕಿ ಜ್ವರದ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಗಮನಹರಿಸಿ ಕ್ರಮಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಮುಂಜಾಗ್ರತಾ ಕ್ರಮವಾಗಿ ಅವಶ್ಯವಿರುವ ಪರಿಕರಗಳು ಮತ್ತು ರೋಗ ನಿಯಂತ್ರಕ ರಾಸಾಯನಿಕಗಳನ್ನು ಕ್ರೂಢೀಕರಿಸಿ ಪರಿಸ್ಥಿತಿಯನ್ನು ನಿಭಾಯಿಸಲು ಸನ್ನದ್ಧರಾಗಲು ಸೂಚನೆ ನೀಡಲಾಗಿದೆ. ಕೇಂದ್ರ ಸರ್ಕಾರ ಪರಿಷ್ಕರಿಸಿ ಹೊರಡಿಸಿರುವ 2021ರ ಹಕ್ಕಿಜ್ವರದ ನಿಯಂತ್ರಣ ಹಾಗೂ ನಿರ್ವಹಣೆ ಮಾರ್ಗಸೂಚಿಗಳ ಪ್ರಕಾರ ಸರ್ವೇಕ್ಷಣೆ, ಕಣ್ಗಾವಲು ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಹಾಗೂ ಇಲಾಖೆಯ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ತಿಳಿಸಿದರು.
ನಗರ ಸಭೆ, ಪುರಸಭೆ ವ್ಯಾಪ್ತಿಯ ಪ್ರದೇಶದಲ್ಲಿ ಹಕ್ಕಿಗಳು, ಕೋಳಿಗಳ ಮರಣ ಸಂಭವಿಸಿದಲ್ಲಿ ಅದರ ಸಮೀಪ ಸಾರ್ವಜನಿಕರು ಹೊಗದಂತೆ ಮತ್ತು ಮುಟ್ಟದಂತೆ ತಿಳುವಳಿಕೆ ನೀಡಬೇಕು. ವೈಯಕ್ತಿಕ ಸುರಕ್ಷತೆಯನ್ನು ಅನುಸರಿಸಿ, ಜೈವಿಕ ಸುರಕ್ಷತಾ ಕ್ರಮಗಳೊಂದಿಗೆ ವಿಲೇವಾರಿ ಮಾಡಲು ಪಶುಸಂಗೋಪನೆ ಇಲಾಖೆಯ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಎಂದರು.
ಎಲ್ಲ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಕುಕ್ಕುಟ ಕ್ಷೇತ್ರಗಳ್ಲಿ ವಿಶೇಷವಾಗಿ, ಪಕ್ಷಿಧಾಮ, ಪ್ರಾಣಿ ಸಂಗ್ರಹಾಲಯ ಹಾಗೂ ನೀರು ಸಂಗ್ರಣ ಸ್ಥಳಗಳ ಬಗ್ಗೆ ಹೆಚ್ಚಿನ ನಿಗಾ ವಹಿಸುವುದು. ಕೋಳಿಗಳು, ಹಿತ್ತಲ ಕೋಳಿಗಳು, ಹಕ್ಕಿಗಳು, ಕಾಡು ಹಕ್ಕಿಗಳು, ವಲಸೆ ಹಕ್ಕಿಗಳ ಯಾವುದೇ ಅಸ್ವಾಭಾವಿಕ ಮರಣ ಸಂಭವಿಸಿದಲ್ಲಿ ಅಥವಾ ರೋಗ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿ. ಕೋಳಿ ಶೀತ ಜ್ವರದ ಸಂಭವನೀಯತೆಯನ್ನು ಪರಿಗಣಿಸಿ, ಸಂಬಂಧಪಟ್ಟ ಪ್ರಯೋಗಾಲಯಕ್ಕೆ ವರದಿ ಮಾಡಿ, ರೋಗ ವಿಶ್ಲೇಷಣೆ ನಡೆಸುವ ಬಗ್ಗೆ ಕ್ರಮ ವಹಿಸಿ ಹಾಗೂ ಜೈವಿಕ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಿ ಎಂದು ಸಚಿವರು ಸೂಚಿಸಿದ್ದಾರೆ.
ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶೀ ರಾಜೇಂದ್ರಕುಮಾರ್ ಕಠಾರಿಯಾ, ಅಯುಕ್ತ ಹೆಚ್.ಬಸವರಾಜೇಂದ್ರ, ನಿರ್ದೇಶಕ ಡಾ.ಬಿ.ಎಸ್.ಶಿವಾರಾಮ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅರಣ್ಯ, ನಗರಾಭಿದ್ಧಿ, ಸಾರಿಗೆ, ಗೃಹ ಇಲಾಖೆ, ಕಂದಾಯ ಇಲಾಖೆ, ಹಣಕಾಸು ಇಲಾಖೆಯ ಅಧಿಕಾರಿಗಳು ಹಾಜರಿದ್ದರು.