ಕೋವಿಡ್ ಮೂರನೇ ಅಲೆ ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮ: ಸಿಎಂ ಬಿ.ಎಸ್.ಯಡಿಯೂರಪ್ಪ

Public TV
2 Min Read
BSY Meeting Shivamogga 2

ಶಿವಮೊಗ್ಗ: ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಸರ್ಕಾರ ಎಲ್ಲಾ ಮುಜಾಗರೂಕತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜನರು ಭೀತಿಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಕೋವಿಡ್ ನಿರ್ವಹಣೆ ಹಾಗೂ ವಿವಿಧ ಅಭಿವೃದ್ದಿ ಚಟುವಟಿಕೆಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

BSY Meeting Shivamogga 1 medium

ಮೂರನೇ ಅಲೆ ಕುರಿತು ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಲು ಸರ್ಕಾರ ಡಾ.ದೇವಿಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು ಈಗಾಗಲೇ ರಚಿಸಿದೆ. ಈ ಸಮಿತಿ ಮೂರ್ನಾಲ್ಕು ದಿನಗಳಲ್ಲಿ ವರದಿಯನ್ನು ಸಲ್ಲಿಸಲಿದ್ದು, ಸಮಿತಿಯ ವರದಿಯ ಆಧಾರದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು. ಮೂರನೇ ಅಲೆಯಿಂದ ಮಕ್ಕಳಿಗೆ ತೊಂದರೆಯಾಗಲಿದೆ ಎಂಬ ವರದಿಗಳಿದ್ದು, ಕೋವಿಡ್‍ನಿಂದ ಮಕ್ಕಳನ್ನು ರಕ್ಷಿಸಲು ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಮಾಡಲಾಗುವುದು. ಪ್ರತಿ ಜಿಲ್ಲೆಯಲ್ಲಿ ಕನಿಷ್ಟ 75 ಮಕ್ಕಳ ಐಸಿಯು ಬೆಡ್ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.

BSY Meeting Shivamogga medium

1,780 ವೈದ್ಯರ ನೇಮಕಾತಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.5ಕ್ಕಿಂತ ಕೆಳಗೆ ಇಳಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ವೈದ್ಯಕೀಯ ಸೇವೆ ಉತ್ತಮಪಡಿಸಲು ಸರ್ಕಾರ ಹಲವು ದಿಟ್ಟ ಹೆಜ್ಜೆ ಇರಿಸಿದೆ. ಇದೇ ಮೊದಲ ಬಾರಿಗೆ 1,780 ವೈದ್ಯರನ್ನು ರಾಜ್ಯದಲ್ಲಿ ನೇರ ನೇಮಕಾತಿ ಮೂಲಕ ಪಡೆದುಕೊಳ್ಳಲಾಗಿದೆ. ಶಿವಮೊಗ್ಗ ಜಿಲ್ಲೆಗೆ 83 ವೈದ್ಯರ ನೇಮಕ ಮಾಡಲಾಗಿದ್ದು, ಇದರಲ್ಲಿ 29 ಮಂದಿ ತಜ್ಞ ವೈದ್ಯರಿದ್ದಾರೆ. ಜಿಲ್ಲೆಯ ವೈದ್ಯಕೀಯ ಕ್ಷೇತ್ರದ ಸುಧಾರಣೆ ಕುರಿತು ಪರಿಶೀಲನೆ ನಡೆಸಲು ಜಿಲ್ಲೆಗೆ ಮತ್ತೊಮ್ಮೆ ಭೇಟಿ ನೀಡಲು ಆರೋಗ್ಯ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

BSY Sudhakar Eshwarappa BY Raghavendra medium

ತಜ್ಞರ ಸಮಿತಿಯಿಂದ ಆಡಿಟ್: ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸಾವುಗಳ ಕುರಿತು ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಆಡಿಟ್ ನಡೆಸಿ ವರದಿಯನ್ನು ಸಲ್ಲಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಮರಣ ಪ್ರಮಾಣ ಹೆಚ್ಚಾಗಿರಲು ಕಾರಣವನ್ನು ಕಂಡುಕೊಳ್ಳಲು ಬೆಂಗಳೂರಿನಿಂದ ತಜ್ಞರ ಸಮಿತಿಯನ್ನು ಕಳುಹಿಸಲಾಗುವುದು. ಜಿಲ್ಲೆಯಲ್ಲಿ ಆಸ್ಪತ್ರೆಗೆ ದಾಖಲಾದ 72ಗಂಟೆಯೊಳಗೆ ಸಾವಿಗೀಡಾದವರ ಪ್ರಮಾಣ ಹೆಚ್ಚಾಗಿದ್ದು, ಈ ಕುರಿತು ಸಮಿತಿ ಪರಿಶೀಲನೆ ನಡೆಸಿ ವರದಿಯನ್ನು ನೀಡಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಸಭೆಯಲ್ಲಿ ತಿಳಿಸಿದರು.

Sudhakar 1 medium

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿರುವವರ ಕೋವಿಡ್ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸಬೇಕು. ಯಾವುದೇ ಕಾರಣಕ್ಕೂ ಹೋಂ ಐಸೋಲೇಷನ್‍ಗೆ ಅವಕಾಶ ನೀಡದರೆ ಕೋವಿಡ್ ಕೇರ್ ಸೆಂಟರ್ ಗಳಲ್ಲಿಯೇ ಪೀಡಿತರಿಗೆ ಚಿಕಿತ್ಸೆ ಒದಗಿಸಬೇಕು. ಶಿವಮೊಗ್ಗ ವೈದ್ಯಕೀಯ ಕಾಲೇಜಿನಲ್ಲಿ ಬೆಡ್‍ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು, ಇದಕ್ಕೆ ಅನುಗುಣವಾಗಿ ವೈದ್ಯರು ಸೇರಿದಂತೆ ಮೂಲಸೌಲಭ್ಯಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಶಿವಮೊಗ್ಗ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯರು, ನರ್ಸ್ ಗಳು ಹಾಗೂ ಡಿ ಗ್ರೂಪ್ ಸಿಬ್ಬಂದಿ ಸಂಖ್ಯೆಯನ್ನು ಹೆಚ್ಚಿಸುವ ಅನಿವಾರ್ಯತೆಯಿದ್ದು, ಈ ಕುರಿತು ಆದಷ್ಟು ಬೇಗನೇ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಜಿಲ್ಲೆಯ ಕೋವಿಡ್ ನಿರ್ವಹಣೆ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳ ಪ್ರಗತಿ ಕುರಿತು ಮಾಹಿತಿಯನ್ನು ನೀಡಿದರು. ನಗರಾಭಿವೃದ್ಧಿ ಸಚಿವ ಬಿ.ಬಸವರಾಜು, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *