ಹಾವೇರಿ: ಕೊರೊನಾ ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸಬೇಕೆಂಬ ಉದ್ದೇಶದಿಂದ ರಾಜ್ಯದಲ್ಲೇ ಮೊದಲ ಬಾರಿಗೆ ಜಿಲ್ಲೆಯಲ್ಲಿ 16 ವರ್ಷದೊಳಗಿನ ಮಕ್ಕಳ ಆರೋಗ್ಯ ತಪಾಸಣೆಗೆ ಗೃಹ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಿದರು.
ನಗರದ ನಾಗೇಂದ್ರನಮಟ್ಟಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಗುರುವಾರ ಮಕ್ಕಳ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಲಾಯಿತು. ಬಳಿಕ ಮಾತನಾಡಿದ ಬಸವರಾಜ್ ಬೊಮ್ಮಾಯಿ ಅವರು, ತಪಾಸಣೆಗೆ ಒಳಗಾದ ಎಲ್ಲ ಮಕ್ಕಳ ಆರೋಗ್ಯ ಮಾಹಿತಿ ಸಂಗ್ರಹಿಸಲಾಗುವುದು. ಮೂರನೇ ಅಲೆಯ ಪರಿಣಾಮ ಕ್ಷೀಣಿಸುವವರೆಗೂ ಅವರಿಗೆ ಅಗತ್ಯ ವೈದ್ಯಕೀಯ ಉಪಚಾರದ ನಿರ್ವಹಣೆ ಮೂಲಕ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದರು.
Advertisement
Advertisement
ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಕ್ಕಳ ತಜ್ಞರು ಪಾಲ್ಗೊಂಡು ತಪಾಸಣೆ ನಡೆಸಲಿದ್ದಾರೆ. ಜೂನ್ 25 ರಿಂದ ಮಕ್ಕಳ ಆರೋಗ್ಯ ತಪಾಸಣೆ ಕಾರ್ಯ ಆರಂಭಗೊಳ್ಳಲಿದೆ. ಜುಲೈ 30ರೊಳಗೆ ಜಿಲ್ಲೆಯ 16 ವರ್ಷದೊಳಗಿನ 2.75 ಲಕ್ಷ ಮಕ್ಕಳ ಆರೋಗ್ಯ ತಪಾಸಣೆ ಪೂರ್ಣಗೊಳಿಸಲಾಗುವುದು. ಮಕ್ಕಳೊಂದಿಗೆ ಶಿಕ್ಷಕರು ಹಾಗೂ ಮಕ್ಕಳ ಪಾಲಕರಿಗೂ ಆರೋಗ್ಯ ತಪಾಸಣೆ ಹಾಗೂ ಕೋವಿಡ್ ವ್ಯಾಕ್ಸಿನ್ ಹಾಕಲು ಕ್ರಮ ವಹಿಸಲಾಗಿದೆ. ಮಕ್ಕಳ ಆರೋಗ್ಯದ ರಕ್ಷಣೆ ಮಾಡಲು ಈ ಶಿಬಿರವನ್ನು ಆರಂಭಿಸಲಾಗಿದೆ ಎಂದು ಹೇಳಿದರು.
Advertisement
Advertisement
ಮಕ್ಕಳಿಗೆ ಕೋವಿಡ್ ಲಸಿಕೆ ಹಾಕಲು ಇನ್ನೂ ನಿರ್ಧಾರವಾಗಿಲ್ಲ. ಹೀಗಾಗಿ ಲಸಿಕೆ ನೀಡುವವರೆಗೂ ಅವರ ಆರೋಗ್ಯದ ಕಾಳಜಿ ಪ್ರಮುಖವಾಗಿದೆ. ಪ್ರತಿಯೊಂದು ಮಕ್ಕಳ ಆರೋಗ್ಯ ತಪಾಸಣೆ ನಡೆಸಿ ಅವರ ದಾಖಲೆಗಳನ್ನು ನಿರ್ವಹಿಸಲಾಗುವುದು. ಮುಂದಿನ ಮೂರು ತಿಂಗಳವರೆಗೆ ಅವರಿಗೆ ಪೌಷ್ಠಿಕ ಆಹಾರ, ಔಷಧಗಳನ್ನು ಒದಗಿಸುವುದರ ಮೂಲಕ ಆರೋಗ್ಯ ಸದೃಢರನ್ನಾಗಿಸಿ, ಕೋವಿಡ್‍ನಿಂದ ರಕ್ಷಿಸುವ ಕೆಲಸ ಮಾಡಲಾಗುವುದು. ತಪಾಸಣೆಯ ಸಂದರ್ಭದಲ್ಲಿ ಅಪೌಷ್ಠಿಕತೆಯಿಂದ ಬಳಲುವ ಮಕ್ಕಳಿಗೆ ಪೌಷ್ಠಿಕ ಆಹಾರ ಕಿಟ್, ಪ್ರೋಟೀನ್ ಸೇರಿದಂತೆ ರೋಗನಿರೋಧ ಶಕ್ತಿ ಹೆಚ್ಚಿಸುವ ಪೂರಕ ಸಾಮಗ್ರಿಗಳನ್ನು ನೀಡಲಾಗುವುದು ಎಂದು ಹೇಳಿದರು.
ಜಿಲ್ಲೆಯ ಪ್ರತಿ ತಾಲೂಕಿನಲ್ಲಿ 30 ರಿಂದ 50 ಸಾವಿರ ಮಕ್ಕಳಿವೆ. ಅವರನ್ನು ತಪಾಸಣೆ ಮಾಡಿ, ಬಯೋಡಾಟಾ, ಆರೋಗ್ಯ ಸಮಸ್ಯೆಗಳ ಕುರಿತಂತೆ ಮಾಹಿತಿ ಸಂಗ್ರಹಿಸಿ ಮುಂದಿನ ನಾಲ್ಕೈದು ತಿಂಗಳು ಮಾನಿಟರ್ ಮಾಡಲಾಗುವುದು. ಶಿಕ್ಷಕರು, ಪಾಲಕರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ದಣಿವರಿಯದೆ ಕೆಲಸ ಮಾಡಿ, ಈ ಕಾರ್ಯಕ್ರಮವನ್ನು ಯಶಸ್ವಿ ಮಾಡಬೇಕು ಎಂದು ಕರೆ ನೀಡಿದರು.
ಶಾಸಕ ಹಾಗೂ ರಾಜ್ಯ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡದ ಆಯೋಗದ ಅಧ್ಯಕ್ಷ ನೆಹರು ಓಲೇಕಾರ ಮಾತನಾಡಿ, ರಾಜ್ಯದಲ್ಲೇ ಪ್ರಥಮವಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಕಾಳಜಿ ವಹಿಸಿ ಕೋವಿಡ್ ಮೂರನೇ ಅಲೆಯ ಪ್ರಭಾವದಿಂದ ಮಕ್ಕಳನ್ನು ರಕ್ಷಿಸಲು ಆರೋಗ್ಯ ತಪಾಸಣೆ ಮಾಡಿಸುತ್ತಿದ್ದಾರೆ. ಮಕ್ಕಳಿಗೆ ಸಣ್ಣ ಜ್ವರ, ಶೀತ ಬಂದರೂ ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ಸೇರಿಸಬೇಕು. ಯಾವುದೇ ಕಾರಣಕ್ಕೂ ಖಾಸಗಿ ಆಸ್ಪತ್ರೆಗಳಿಗೆ ಮಕ್ಕಳನ್ನು ತಪಾಸಣೆಗೆ ಕರೆದುಕೊಂಡು ಹೋಗಬೇಡಿ. ಮುಂದಿನ ಮೂರು ತಿಂಗಳವರೆಗೆ ಮಕ್ಕಳಿಗೆ ಯಾವುದೇ ಆರೋಗ್ಯ ಸಮಸ್ಯೆ ಇದ್ದರೆ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ. ಬೇರೆಯವರ ಮನೆಗೆ ಮಕ್ಕಳನ್ನು ಕಳುಹಿಸಬೇಡಿ. ಶಿಕ್ಷಕರ ಬಳಿ ಮಕ್ಕಳ ಆರೋಗ್ಯದ ಬಗ್ಗೆ ಮಾಹಿತಿ, ಚಿಕಿತ್ಸೆಗೆ ನೆರವು ಪಡೆಯಿರಿ ಎಂದು ಮನವಿ ಮಾಡಿಕೊಂಡರು.
ಮಕ್ಕಳ ಆರೋಗ್ಯ ತಪಾಸಣೆ ಶಿಬಿರದಲ್ಲಿ ಪಾಲ್ಗೊಂಡ ಮಕ್ಕಳಿಗೆ ಪೌಷ್ಠಿಕ ಆಹಾರದ ಕಿಟ್, ಅಕ್ಷರ ದಾಸೋಹದಡಿ ಆಹಾರದ ಕಿಟ್, ಅಂಗವಾಡಿ ಮಕ್ಕಳಿಗೆ ಔಷಧಿ ಕಿಟ್, ಕಡಿಮೆ ತೂಕದ ಮಕ್ಕಳಿಗೆ ಪೂರಕ ಪೌಷ್ಠಿಕ ಪ್ರೋಟಿನ್ ಕಿಟ್‍ಗಳನ್ನು ಗೃಹ ಸಚಿವರು ಹಾಗೂ ಶಾಸಕರು ವಿತರಿಸಿದರು.