ರಾಜ್ಯದಲ್ಲಿ ಕೊರೊನಾದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಕಡಿಮೆ ಮಾಡುವಂತೆ ಸಿಎಂ ಸೂಚನೆ

Public TV
2 Min Read
BSY 18

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಮೈಸೂರು, ಹಾಸನ, ಬೆಳಗಾವಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳ ಸಂಸದರು ಮತ್ತು ಶಾಸಕರೊಂದಿಗೆ ವೀಡಿಯೋ ಸಂವಾದ ನಡೆಸಿ, ಕೋವಿಡ್ 19 ಸೋಂಕು ತಡೆಗಟ್ಟುವ ಕುರಿತಂತೆ ಚರ್ಚೆ ನಡೆಸಿದರು.

ಎರಡೂವರೆ ಗಂಟೆಗೂ ಹೆಚ್ಚು ಕಾಲ ನಡೆದ ಈ ಸಭೆಯಲ್ಲಿ ಕೋವಿಡ್ ನಿರ್ವಹಣೆಯಲ್ಲಿ ಎದುರಾಗುತ್ತಿರುವ ಸಮಸ್ಯೆಗಳು, ಸವಾಲುಗಳ ಕುರಿತು ಮುಕ್ತವಾಗಿ ಚರ್ಚಿಸಲಾಯಿತು. ಪಾಸಿಟಿವಿಟಿ ದರ ಶೇ. 10 ಕ್ಕಿಂತ ಕಡಿಮೆ ಮಾಡುವಂತೆ ಸೂಚಿಸಲಾಯಿತು. ಅಂತೆಯೇ ಮರಣ ಪ್ರಮಾಣ ರಾಜ್ಯದಲ್ಲಿ ಶೇ.1.7 ರಷ್ಟು ಇದ್ದು, ಇದನ್ನು ಕಡಿಮೆ ಮಾಡುವಂತೆ ಸೂಚಿಸಲಾಯಿತು.

ರಾಜ್ಯದಲ್ಲಿ ಒಟ್ಟು ವರದಿಯಾಗುತ್ತಿರುವ ಪ್ರಕರಣಗಳಲ್ಲಿ ಬೆಂಗಳೂರು ನಗರ, ಮೈಸೂರು, ತುಮಕೂರು, ಹಾಸನ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಒಟ್ಟು ಶೇ. 60 ಪ್ರಕರಣಗಳು ವರದಿಯಾಗುತ್ತಿದೆ. ಇದನ್ನು ಕಡಿಮೆಗೊಳಿಸಲು ತಿಳಿಸಲಾಯಿತು. ಅಂತೆಯೇ ಮರಣ ಪ್ರಮಾಣವೂ ಹೆಚ್ಚಾಗಿದ್ದು, ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.

ಕೋವಿಡ್ 19ರ ಎರಡನೇ ಅಲೆ, ನಿರೀಕ್ಷೆಗೂ ಮೀರಿ ತೀವ್ರವಾಗಿ ಬಾಧಿಸಿದೆ. ಆದರೆ ಈಗ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ಸಮಾಧಾನದ ಸಂಗತಿ. ಕೋವಿಡ್ 19 ಸೋಂಕು ತೀವ್ರವಾಗಿದ್ದಾಗ ಎಲ್ಲ ಜನಪ್ರತಿನಿಧಿಗಳೂ ಅಧಿಕಾರಿಗಳೊಂದಿಗೆ ಕೈಜೋಡಿಸಿ, ಸೋಂಕು ನಿಯಂತ್ರಣಕ್ಕೆ ಶ್ರಮಿಸಿದ್ದಕ್ಕೆ ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಆದರೆ ಪ್ರಕರಣ ಕಡಿಮೆಯಾಗುತ್ತಿರುವ ಕುರಿತು ಕೈಕಟ್ಟಿ ಕೂರುವಂತಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಪ್ರಕರಣಗಳ ಪ್ರಮಾಣ ಹೆಚ್ಚಾಗುತ್ತಿದೆ. ಈ ಕುರಿತು ನಾವು ಹೆಚ್ಚಿನ ಗಮನ ಹರಿಸಬೇಕಾಗಿದೆ. ಗ್ರಾಮೀಣ ಭಾಗದಲ್ಲಿ ಹೋಂ ಐಸೋಲೇಷನ್ ಬದಲು ಸೋಂಕಿತರನ್ನು ಕೋವಿಡ್ ಕೇರ್ ಸೆಂಟರುಗಳಿಗೆ ದಾಖಲಿಸಲು ಮನವೊಲಿಸಬೇಕಾಗಿದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಶಾಸಕರು ಹಾಗೂ ಸಂಸದರು ತಮ್ಮ ಕ್ಷೇತ್ರಗಳಲ್ಲಿ ಕೋವಿಡ್ ಪರೀಕ್ಷೆಗಳನ್ನು ನಡೆಸಿ, ಸೋಂಕಿತರನ್ನು ಪತ್ತೆ ಹಚ್ಚಿ ಸಕಾಲದಲ್ಲಿ ಅವರಿಗೆ ಸೂಕ್ತ ಚಿಕಿತ್ಸೆ ದೊರೆಯುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಇದರಿಂದ ಮರಣ ಪ್ರಮಾಣ ಕಡಿಮೆಯಾಗುವುದು. ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದ ಚಿಕಿತ್ಸಾ ಸೌಲಭ್ಯಗಳು, ಔಷಧ, ಆಮ್ಲಜನಕ, ವಿವಿಧ ಉಪಕರಣಗಳು ಅಗತ್ಯಕ್ಕೆ ಅನುಗುಣವಾಗಿ ಸಮರ್ಪಕವಾಗಿ ಹಂಚಿಕೆಯಾಗಬೇಕು. ಎಲ್ಲಿಯೂ ಸಮಸ್ಯೆ ತಲೆದೋರದಂತೆ ಸಂಪನ್ಮೂಲಗಳ ದಕ್ಷ ಬಳಕೆಯನ್ನು ಖಾತರಿಪಡಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಸಂವಾದದಲ್ಲಿ ಭಾಗವಹಿಸಿದ ಶಾಸಕರು, ಸಂಸದರು, ಕೋವಿಡ್ 19 ನಿರ್ವಹಣೆ ಜೊತೆಗೆ ತಳಹಂತದ ಹಲವಾರು ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳ ಗಮನ ಸೆಳೆದರು. ಇವುಗಳನ್ನು ಶೀಘ್ರವೇ ಬಗೆಹರಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದರು. ಆಶಾ ಕಾರ್ಯಕರ್ತೆಯರ ಬಾಕಿ ವೇತನ ಬಿಡಗಡೆಗೆ ಈಗಾಗಲೇ ಕ್ರಮ ವಹಿಸಲಾಗಿದ್ದು, ಎರಡು ಮೂರು ದಿನಗಳಲ್ಲಿಯೇ ದೊರೆಯಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಪ್ರತಿ ತಾಲೂಕಿಗೆ 25 ಲಕ್ಷ ರೂ. ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಸರ್ಕಾರವು ಈಗಾಗಲೇ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ 50 ಲಕ್ಷ ರೂ. ಗಳನ್ನು ಕೋವಿಡ್ ನಿರ್ವಹಣೆಗೆ ಬಳಕೆ ಮಾಡಲು ಅನುಮತಿ ನೀಡಲಾಗಿದೆ. ಅಲ್ಲದೆ ಗ್ರಾಮ ಪಂಚಾಯ್ತಿಗಳಿಗೆ ತಲಾ 50 ಸಾವಿರ ರೂ. ಬಿಡುಗಡೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಭೆಯಲ್ಲಿ ವೈದ್ಯರ ಕೊರತೆ ಕುರಿತು ಚರ್ಚೆ ನಡೆಯಿತು. ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು ರಾಜ್ಯ ಸರ್ಕಾರ ಈಗಾಗಲೇ 1200 ವೈದ್ಯರ ನೇಮಕ ಮಾಡಿಕೊಳ್ಳುತ್ತಿದ್ದು, ಶೀಘ್ರವೇ ಸಮಸ್ಯೆ ಬಗೆಹರಿಯಲಿದೆ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *