– 400ಕ್ಕೂ ಹೆಚ್ಚು ಹಾಸಿಗೆಗಳ ಸುಸಜ್ಜಿತ ಕಾಲೇಜು
– ರಾಜ್ಯದಲ್ಲಿ 2,500 ವೈದ್ಯರ ನೇರ ನೇಮಕ
ಬೆಂಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ 24ರಿಂದ 30 ತಿಂಗಳಲ್ಲಿ ಸುಸಜ್ಜಿತ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಕಾಲೇಜಿನ ಕಟ್ಟಡ ನಿರ್ಮಾಣ ಯೋಜನೆ ಹಾಗೂ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಕಟ್ಟಡದ ನಿರ್ಮಾಣದ ಭೂಮಿ ಪೂಜೆಗೆ ಡಿಸೆಂಬರಿನಲ್ಲಿ ದಿನ ಗೊತ್ತುಪಡಿಸಲಾಗುವುದು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಕಾರ್ಯಕ್ರಮಕ್ಕೆ ಬರಲಿದ್ದಾರೆ. ಕಟ್ಟಡ ವಿನ್ಯಾಸ ಉತ್ತಮವಾಗಿದ್ದು, ಕೆಲ ಬದಲಾವಣೆ ಸೂಚಿಸಲಾಗಿದೆ. 400ಕ್ಕೂ ಹೆಚ್ಚು ಹಾಸಿಗೆ ಇರುವ ಈ ವೈದ್ಯಕೀಯ ಕಾಲೇಜಿನ ಜೊತೆಗೆ 200 ಹಾಸಿಗೆಯ ತಾಯಿ-ಶಿಶುವಿನ ಆಸ್ಪತ್ರೆ ನಿರ್ಮಾಣವಾಗಲಿದೆ ಎಂದು ತಿಳಿಸಿದರು.
ಮುಂದಿನ ಜೂನ್ ವೇಳೆಗೆ ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ವ್ಯಾಸಂಗ ಮಾಡಬಹುದು. ಅದಕ್ಕಾಗಿ ತಾತ್ಕಾಲಿಕ ಕಟ್ಟಡ ಗುರುತಿಸಿದ್ದು, ಹೊಸ ಕಟ್ಟಡ ನಿರ್ಮಾಣ ಬಳಿಕ ಸ್ಥಳಾಂತರಿಸಲಾಗುತ್ತದೆ. ಜೊತೆಗೆ ಎನ್‍ಎಂಸಿ ನಿಯಮದಂತೆ, 3 ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಒಂದು ನಗರ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುವುದು. 69 ಬೋಧಕ ಸಿಬ್ಬಂದಿ ನೇಮಕಕ್ಕೆ ಈಗಾಗಲೇ ಪರವಾನಗಿ ನೀಡಿದ್ದು, 91 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪೈಕಿ ನಾಲ್ಕರಲ್ಲಿ ವೈದ್ಯ ಹುದ್ದೆ ಭರ್ತಿ ಮಾಡಲಾಗುವುದು ಎಂದು ವಿವರಿಸಿದರು.
ಚಿಕ್ಕಮಗಳೂರಿನಲ್ಲಿ ದಿನಕ್ಕೆ 1,900 ಕೋವಿಡ್ ಪರೀಕ್ಷೆ ನಿಗದಿಪಡಿಸಿದ್ದು, ಇದಕ್ಕೂ ಹೆಚ್ಚಿನ ಪರೀಕ್ಷೆ ನಡೆಯುತ್ತಿದೆ. ಇದರಿಂದಾಗಿ ಸೋಂಕು ನಿಯಂತ್ರಣಕ್ಕೆ ಬಂದಿದೆ. ಜಿಲ್ಲೆಯಲ್ಲಿ ಕೋವಿಡ್ ಮರಣ ಪ್ರಮಾಣ ಶೇ.1.08 ರಷ್ಟಿದೆ. ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ, ಹೆಚ್ಚು ಜನರಿಗೆ ಚಿಕಿತ್ಸೆ ನೀಡಬೇಕೆಂದು ಸೂಚಿಸಲಾಗಿದೆ ಎಂದರು.
ಇಂದು ಚಿಕ್ಕಮಗಳೂರಿಗೆ ಭೇಟಿ ನೀಡಿ ನಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವೈದ್ಯಕೀಯ ಕಾಲೇಜಿನ ಕ್ಯಾಂಪಸ್‌ನ ವಿನ್ಯಾಸ ಹಾಗೂ ಇತರೆ ಅಂಶಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಸೂಚನೆಗಳನ್ನು ನೀಡಲಾಯಿತು. ಬಳಿಕ ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಯೋಜನೆಗಳ ಅನುಷ್ಠಾನದ ಬಗ್ಗೆ ಪರಿಶೀಲನೆ ನಡೆಸಲಾಯಿತು. pic.twitter.com/ubo2yCNoWy
— Dr Sudhakar K (@mla_sudhakar) November 7, 2020
ಪ್ರತಿ ತಿಂಗಳು ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆರೋಗ್ಯ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಸ್ಥಳೀಯ ಆರೋಗ್ಯಾಧಿಕಾರಿಗಳ ಮೇಲೆ ನಿಗಾ ಇರಿಸಿ, ಸೌಲಭ್ಯಗಳು ಜನರಿಗೆ ತಲುಪಲು ಕ್ರಮ ವಹಿಸಬೇಕು ಎಂದು ಸೂಚಿಸಲಾಗಿದೆ. ಜನೌಷಧಿ ಮಳಿಗೆಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆರಂಭಿಸಲು ತೀರ್ಮಾನಿಸಿದ್ದು, ಈ ಬಗ್ಗೆಯೂ ಚರ್ಚೆಯಾಗಿದೆ ಎಂದು ವಿವರಿಸಿದರು.
2,500 ವೈದ್ಯರ ನೇಮಕ
ರಾಜ್ಯದಲ್ಲಿ 2,500 ವೈದ್ಯರ ನೇರ ನೇಮಕ ಪ್ರಕ್ರಿಯೆ ಆರಂಭವಾಗಿದೆ. ನವೆಂಬರ್ ಅಂತ್ಯದ ವೇಳೆಗೆ ಪ್ರಕ್ರಿಯೆ ಮುಗಿಯಲಿದೆ. ವೈದ್ಯರ ಕೊರತೆ ಆಗಬಾರದು ಎಂಬ ದೃಢ ಸಂಕಲ್ಪ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಸಚಿವರು ಹೇಳಿದ ಇತರೆ ಅಂಶಗಳು
1. ನವೆಂಬರ್ ಅಂತ್ಯದೊಳಗೆ ಹೋಮ್ ಸ್ಟೇಗಳ ಮಾಹಿತಿ ಪಡೆದು ಅಲ್ಲಿ ಇರುವವರ ಮೇಲೆ ನಿಗಾ ಇರಿಸಲಾಗುತ್ತದೆ. ಅವರಿಗೆ ಕೋವಿಡ್ ಪರೀಕ್ಷೆ ಮಾಡಲಾಗುವುದು.
2. ಚಿಕ್ಕಮಗಳೂರು ತಾಲೂಕು ಆಸ್ಪತ್ರೆಗಳಲ್ಲಿ 50 ಹಾಸಿಗೆಗಳಿಗೆ ಆಕ್ಸಿಜನ್ ಅಳವಡಿಸಲಾಗಿದೆ.
3. ಖಾಸಗಿ ಆಸ್ಪತ್ರೆಗಳು ಹೆಚ್ಚು ಶುಲ್ಕ ವಸೂಲಿ ಮಾಡಿದರೆ, ಪರವಾನಗಿ ರದ್ದು ಮಾಡುವ ಕಠಿಣ ಕ್ರಮ ಕೈಗೊಳ್ಳಲಾಗುವುದು.
4. ಸರ್ಕಾರಕ್ಕೆ ಕಠಿಣ ಸವಾಲುಗಳಿವೆ. ಕೋವಿಡ್ ನಿಂದಾದ ಆರ್ಥಿಕ ಸಂಕಷ್ಟ, ಅತಿವೃಷ್ಟಿ ಮೊದಲಾದ ಸವಾಲುಗಳು ಬಂದಿವೆ. ಸರ್ಕಾರ ಎಂದರೆ ಅಕ್ಷಯಪಾತ್ರೆ ಅಲ್ಲ. ಇಂತಹ ಸಂದರ್ಭದಲ್ಲಿ ಅನಿವಾರ್ಯವಾಗಿ ವಿದ್ಯುತ್ ದರ ಏರಿಕೆ ಮಾಡಲಾಗಿದೆ.
5. ಪರಿಸರ ಸ್ನೇಹಿ ಪಟಾಕಿ ಸಿಡಿಸಲು ಅವಕಾಶವಿದೆ. ಸರ್ಕಾರಕ್ಕೆ ಜನರ ಆರೋಗ್ಯ ಮುಖ್ಯವೇ ಹೊರತು ಯಾರದ್ದೇ ಲಾಭವಲ್ಲ.
6. ಕೆಲ ಡಯಾಲಿಸಿಸ್ ಕೇಂದ್ರಗಳ ನಿರ್ವಹಣೆಯನ್ನು ಪಿಪಿಪಿ ಮಾದರಿಯಲ್ಲಿ ಮಾಡಲಾಗಿದೆ. ಆದರೆ ನಿರ್ವಹಣೆ ಮಾಡುತ್ತಿದ್ದ ಕಂಪನಿ ಆರ್ಥಿಕ ಸಂಕಷ್ಟಕ್ಕೊಳಗಾಗಿದೆ. ಇದಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು.