ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ಅಧಿಕಾರಿಗಳು ಎಫ್‍ಐಆರ್ ದಾಖಲಿಸಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ಡಿಕೆಶಿ ಮನೆ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ಇದೀಗ ಬೆಂಗಳೂರಿನ ಸಿಸಿಬಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷನ ವಿರುದ್ಧ ಎಫ್‍ಆರ್ ದಾಖಲಿಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ ಆರೋಪದ ಮೇಲೆ ಈ ಎಫ್‍ಐಆರ್ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ಸದಾಶಿವನಗರದಲ್ಲಿರುವ ಡಿ.ಕೆ ಶಿವಕುಮಾರ್ ನಿವಾಸದ ಮೇಲೆ ಇಂದು ಐವರು ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ. ರಾಜ್ಯ ಸರ್ಕಾರದ ಅನುಮತಿ ಮೇರೆಗೆ ಇಂದು ಬೆಳಗ್ಗೆ 8 ಗಂಟೆಗೆ ಸಿಬಿಐ ಅಧಿಕಾರಿಗಳು ಏಕಾಏಕಿ ದಾಳಿ ಮಾಡಿದ್ದು, ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ಡಿಕೆಶಿಗೆ ಸೇರಿದ ಹಲವು ಕಡೆಗಳಲ್ಲಿ ಕೂಡ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಕಳೆದ ವರ್ಷ ಸೆಪ್ಟೆಂಬರ್ 3ರಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿ ಡಿಕೆಶಿ ಜೈಲು ಸೇರಿದ್ದರು. ಇದೀಗ ಒಂದು ವರ್ಷ ಕಳೆಯುವ ಬೆನ್ನಲ್ಲೇ ಮತ್ತೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಡಿ.ಕೆ ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಮನೆಯ ಮೇಲೂ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದು, ಅವರ ಮನೆಯಲ್ಲೂ ಶೋಧಕಾರ್ಯ ನಡೆಸುತ್ತಿದ್ದಾರೆ.
ಇತ್ತ ಡಿಕೆಶಿ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದು, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮನೆ ಮೇಲೆ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ. ರಾಜಕೀಯ ದುಷ್ಟತನದ ಪರಮಾವಧಿ ಎಂದು ಹೇಳುವ ಮೂಲಕ ದಾಳಿ ಖಂಡಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾದ @DKShivakumar ಮನೆ ಮೇಲೆ @narendramodi ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ.
ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ @BJP4India ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ.
— Siddaramaiah (@siddaramaiah) October 5, 2020
ಅಷ್ಟೇ ಅಲ್ಲದೇ ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ ಸಿದ್ದರಾಮಯ್ಯ ಟ್ವಿಟ್ಟರಿನಲ್ಲಿ ಬರೆದುಕೊಂಡಿದ್ದಾರೆ.