ಮಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧಿತನಾಗಿರುವ ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿಯ ಗೆಳತಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕಿಶೋರ್ ಗೆಳತಿ ಮಂಗಳೂರಿನ ಸ್ಪಾದಲ್ಲಿ ಕೆಲಸ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಮಣಿಪುರ ಮೂಲದ ಆಸ್ಕಾ ಬಂಧಿತ ಯುವತಿ. ಕಿಶೋರ್ ಶೆಟ್ಟಿ ಜೊತೆ ಡ್ರಗ್ಸ್ ಪಾರ್ಟಿಯಲ್ಲಿ ಆಸ್ಕಾ ಭಾಗಿಯಾಗುತ್ತಿದ್ದಳು. ಲಾಕ್‍ಡೌನ್ ಸಂದರ್ಭದಲ್ಲಿಯೂ ನಡೆಯುತ್ತಿದ್ದ ಪಾರ್ಟಿಗಳಿಗೆ ಆಸ್ಕಾ ತನ್ನ ಗೆಳತಿಯರ ಜೊತೆ ಆಗಮಿಸುತ್ತಿದ್ದಳು. ಈ ಸಂಬಂಧ ಆಸ್ಕಾಳ ಸ್ನೇಹಿತರಿಗೆ ನೋಟಿಸ್ ನೀಡಲು ತಯಾರಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಸೆಪ್ಟೆಂಬರ್ 19ರಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರಿಂದ ಎಂಡಿಎಂ ಪೌಡರ್, ಬೈಕ್, 2 ಮೊಬೈಲ್ ಫೋನ್ ಸೇರಿದಂತೆ 1 ಲಕ್ಷ ಮೌಲ್ಯದ ವಸ್ತು ವಶಕ್ಕೆ ಪಡೆದುಕೊಳ್ಳಲಾಗಿತ್ತು. ಆರೋಪಿಗಳು ಮುಂಬೈಯಿಂದ ವಸ್ತುಗಳನ್ನು ಖರೀದಿಸಿ ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು. ಇಬ್ಬರ ಮೇಲೆ ಸೇವನೆ ಮತ್ತು ಮಾರಾಟ ಎರಡೂ ಪ್ರಕರಣ ದಾಖಲಾಗಿದೆ.
ಆರೋಪಿ ಅಕೀಲ್ ನೌಶೀಲ್ ಈ ಹಿಂದೆ ವಿದೇಶದಲ್ಲಿ ಸೇಫ್ಟಿ ಆಫೀಸರ್ ಆಗಿದ್ದ. ಒಂದು ವರ್ಷದ ಊರಿಗೆ ಬಂದಿದ್ದ ಈತ, ಕಿಶೋರ್ ಅಮನ್ ಶೆಟ್ಟಿ ಜೊತೆ ಡ್ಯಾನ್ಸರ್, ಕೋರಿಯೋಗ್ರಾಫರ್ ಆಗಿ ಕೆಲಸ ಮಾಡಿಕೊಂಡಿದ್ದ. ಅಲ್ಲದೆ ಅಕೀಲ್ ನೌಶೀಲ್ ಜೊತೆ ಸೇರಿ ಮಾದಕ ವಸ್ತು ಖರೀದಿಸಿ ಮಾರಾಟ ಮಾಡುತ್ತಿದ್ದ. ಬೆಂಗಳೂರು, ಮುಂಬೈಯಿಂದ ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡುತ್ತಿದ್ದರು. ಈ ಪ್ರಕರಣದಲ್ಲಿ ಇನ್ನೂ ಕೆಲ ಆರೋಪಿಗಳಿದ್ದಾರೆ. ಇವರ ಚೈನ್ ಲಿಂಕ್ ಬಗ್ಗೆ ಸಂಪೂರ್ಣ ತನಿಖೆ ನಡೆಸುತ್ತಿದ್ದೇವೆ ಎಂದು ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದರು.