ಚಾಮರಾಜನಗರ: ಕೇರಳ ನಂತರ ತಮಿಳುನಾಡಿನಿಂದ ಬರುವವರಿಗೂ ಆರ್‍ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿ ಜಿಲ್ಲಾಧಿಕಾರಿ ಎಂ.ಆರ್.ರವಿ ಆದೇಶ ಹೊರಡಿಸಿದ್ದಾರೆ.
ನೆರೆ ರಾಜ್ಯಗಳಿಂದ ಬರುವ ಪ್ರತಿಯೊಬ್ಬರಿಗೂ 72 ಗಂಟೆಯೊಳಗಿನ ಆರ್‍ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿದೆ. ಇದೀಗ ಪಾಲಾರ್, ಅರ್ಧನಾರಿಪುರ, ನಾಲ್ ರೋಡ್,ಪುಣಜನೂರು, ಕೆಕ್ಕನಹಳ್ಳ, ಮೂಲೆಹೊಳೆ ಚೆಕ್ ಪೋಸ್ಟ್ ನಲ್ಲಿ ಬಿಗಿ ಕ್ರಮ ಜರುಗಿಸಲಾಗಿದೆ. ಎರಡೂ ಡೋಸ್ ಲಸಿಕೆ ಪಡೆದವರಿಗೂ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ತಿಳಿಸಲಾಗಿದ್ದು, ಪ್ರತಿಯೊಬ್ಬರನ್ನೂ ಪರಿಶೀಲಿಸಿ, ನೆಗೆಟಿವ್ ವರದಿ ಇದ್ದರೆ ಮಾತ್ರ ರಾಜ್ಯದೊಳಗೆ ಬಿಡಿ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಶುಕ್ರವಾರವಷ್ಟೇ ಜಿಲ್ಲೆಗೆ ಆಗಮಿಸಿದ್ದ ಸಚಿವ ಎಸ್.ಟಿ.ಸೋಮಶೇಖರ್, ಟೆಸ್ಟ್ ರಿಪೋರ್ಟ್ ಕಡ್ಡಾಯ ಮಾಡುವಂತೆ ನಿನ್ನೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದರು. ಅದರಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.