ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ತೌಕ್ತೆ ಚಂಡಮಾರುತ ಎದ್ದಿರುವ ಹಿನ್ನೆಲೆ ರಾಜ್ಯದ ಹಲವೆಡೆ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಅಲ್ಲದೆ ಸಮುದ್ರದಲ್ಲಿ ರಕ್ಕಸ ಅಲೆಗಳು ಏಳುತ್ತಿದ್ದು, ಕಡಲ್ಕೊರೆತ ಸಂಭವಿಸಿದೆ.
ದಕ್ಷಿಣ ಕನ್ನ, ಕೊಡಗು, ಉಡುಪಿ, ಚಿಕ್ಕಮಗಳೂರು ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಸಂಜೆ ವೇಳೆ ಇನ್ನೂ ಹಲವು ಜಿಲ್ಲೆಗಳಿಗೆ ಮಳೆ ವ್ಯಾಪಿಸಿಕೊಳ್ಳಲಿದೆ. ಚಂಡಮಾರುತ ಎಫೆಕ್ಟ್ ನಿಂದಾಗಿ ದ.ಕ ಜಿಲ್ಲೆಯಾದ್ಯಾಂತ ಭಾರೀ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ಜಿಲ್ಲೆಯ ಎಲ್ಲ ಭಾಗಗಳಲ್ಲೂ ಬೆಳಗ್ಗೆಯಿಂದ ಭಾರೀ ಮಳೆ ಸುರಿಯುತ್ತಿದೆ. ಅರಬ್ಬೀ ಸಮುದ್ರದಲ್ಲೂ ಅಲೆಗಳ ಅಬ್ಬರ ಹೆಚ್ಚಾಗಿದೆ. ಹವಾಮಾನ ಇಲಾಖೆ ಭಾರೀ ಗಾಳಿ, ಮಳೆ ಸುರಿಯುವ ಸೂಚನೆ ನೀಡಿದ್ದು, ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಿದೆ.
ಕೊಡಗು ಜಿಲ್ಲೆಯಲ್ಲಿ ಸಹ ಬೆಳಗ್ಗೆಯಿಂದ ಎಡಬಿಡದೆ ಮಳೆಯಾಗುತ್ತಿದೆ. ಬಿರುಗಾಳಿ ಸಹಿತ ಮಳೆಗೆ ಜನ ಆತಂಕಗೊಂಡಿದ್ದಾರೆ. ಮಡಿಕೇರಿ, ವಿರಾಜಪೇಟೆ ಸೇರಿದಂತೆ ವಿವಿಧೆಡೆ ವರುಣನ ಆರ್ಭಟ ಜೋರಾಗಿದೆ. ಮಡಿಕೇರಿ ರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿವೆ. ಕೊಡಗು ಜಿಲ್ಲೆಯಲ್ಲಿ ಸಹ ಎರಡು ದಿನಗಳು ರೆಡ್ ಅಲರ್ಟ್ ಘೊಷಿಸಲಾಗಿದೆ. ಗುಡ್ಡಗಾಡು ಪ್ರದೇಶದ ಜನರಲ್ಲಿ ಆತಂಕ ಶುರುವಾಗಿದೆ. ಮಧ್ಯಾಹ್ನದ ಬಳಿಕ ಮಳೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
ಉಡುಪಿ ಹಾಗೂ ಚಿಕ್ಕಮಗಳೂರಿನಲ್ಲಿ ತುಂತುರು ಮಳೆಯಾಗುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಗಾಳಿ ಸಹಿತ ತುಂತುರು ಮಳೆಯಾಗುತ್ತಿದೆ. ದಿನವಿಡೀ ಮಳೆ ಸುರಿಯುವ ಸಾಧ್ಯತೆ ಇದ್ದು, ಅತ್ತ ಅರಬ್ಬಿ ಸಮುದ್ರದಲ್ಲಿ ಅಲೆಗಳ ಆರ್ಭಟ ಜೋರಾಗಿದೆ. ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಮರವಂತೆ ಉಪ್ಪುಂದ ಪರಿಸರದಲ್ಲಿ ಕಡಲ್ಕೊರೆತ ಉಂಟಾಗಿದೆ. ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ರಾಜ್ಯದ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಕಾಫಿನಾಡಿನಲ್ಲಿ ಹಲವೆಡೆ ತುಂತುರು ಮಳೆಯಾಗುತ್ತಿದ್ದು, ಚಿಕ್ಕಮಗಳೂರು ನಗರ, ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ ಸೇರಿದಂತೆ ಹಲವೆಡೆ ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆ ಶುರುವಾಗಿದೆ. ಅಲ್ಲದೆ ಜಿಲ್ಲೆಯಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಲೆನಾಡು ಭಾಗದ ಜನರು ಎಚ್ಚರದಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.