ಬೆಂಗಳೂರು: ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದ್ದು, ಬಸವರಾಜ್ ಬೊಮ್ಮಾಯಿ ಅವರು ಸಿಎಂ ಆಗಿ ಆಯ್ಕೆಯಾಗಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಬೊಮ್ಮಾಯಿ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನಾಳೆ ಸಿಎಂ ಒಬ್ಬರೇ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಇದಾದ ಬಳಿಕ ಮಂತ್ರಿ ಮಂಡಲ ರಚನೆ ನಡೆಯಲಿದೆ.
ಇಂದು ನಡೆದ ಶಾಸಕಾಂಗ ಸಭೆಯಲ್ಲಿ ಯಾವುದೇ ಚರ್ಚೆ ಇಲ್ಲದೆ ಬಸವರಾಜ್ ಬೊಮ್ಮಾಯಿ ಹೆಸರನ್ನು ಅನುಮೋದಿಸಲಾಯಿತು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ನನ್ನನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ. ನಾನು ಎಲ್ಲರನ್ನು ಒಗ್ಗೂಡಿಸಿಕೊಂಡು, ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ. ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಜನಪರ ಆಡಳಿತ ನೀಡುತ್ತೇನೆ ಎಂದರು.
ರಾಜ್ಯದಲ್ಲಿ ಕೋವಿಡ್ ಸಂಕಷ್ಟ ಮತ್ತು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಪರಿಹರಿಸುವ ಕೆಲಸ ಮಾಡುತ್ತೇನೆ. ಹೈಕಮಾಂಡ್ ಯಾವುದೇ ಷರತ್ತು ವಿಧಿಸಿಲ್ಲ. ಯಡಿಯೂರಪ್ಪನವರ ನಿರೀಕ್ಷೆಗಳನ್ನು ಈಡೇರಿಸುತ್ತೇನೆ ಎಂದು ಭರವಸೆ ನೀಡಿದರು.