ಧಾರವಾಡ: ಬಿಜೆಪಿ ಮುಖಂಡ ಯೋಗೇಶ್ವರ್ ಕೊಲೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು, ಇದು ಶೇ.100 ರಷ್ಟು ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದಾರೆ.
ಸತತ 9 ಗಂಟೆಗಳ ಸಿಬಿಐ ಅಧಿಕಾರಿಗಳ ವಿಚಾರಣೆ ಎದುರಿಸಿದ ಬಳಿಕ ಅವರನ್ನು ಬಂಧಿಸಿ ವೈದ್ಯಕೀಯ ಪರೀಕ್ಷೆ ಹಾಗೂ ಕೊರೊನಾ ಪರೀಕ್ಷೆ ನಡೆಸಲು ಧಾರವಾಡ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ವಿಚಾರಣೆಯ ಕುರಿತು ಪ್ರತಿಕ್ರಿಯೆ ನೀಡಿದ ವಿನಯ್ ಕುಲಕರ್ಣಿ ಅವರು, ಈ ಕೇಸಿನಲ್ಲಿ ನೂರಕ್ಕೆ ನೂರರಷ್ಟು ರಾಜಕೀಯ ಇದೆ. ಇದರಲ್ಲಿ ಹೇಳೋದು ಏನಿದೆ ಎಂದು ಪ್ರಶ್ನೆ ಮಾಡಿ ಮುಂದೆ ಸಾಗಿದರು.
ವೈದ್ಯಕೀಯ ಪರೀಕ್ಷೆಯ ಬಳಿಕ ವಿನಯ್ ಕುಲಕರ್ಣಿ ಅವರನ್ನು ನ್ಯಾಯಾಧೀಶರ ಎದುರು ಹಾಜರು ಪಡಿಸಲಾಯಿತು. ಸದ್ಯ ಅವರನ್ನು ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ಬೆಳಗಾವಿಯ ಹಿಂಡಲಗಾ ಜೈಲಿಗೆ ಅವರನ್ನು ಕರೆತರಲಾಗಿದೆ. ಇತ್ತ ವಿನಯ್ ಕುಲಕರ್ಣಿ ಅವರು ಬಂಧನ ವಿರೋಧಿಸಿ ಅವರ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಇತ್ತ ಅವರನ್ನು ಜಿಲ್ಲಾಸ್ಪತ್ರೆಗೆ ಕರೆತಂದ ಸಂದರ್ಭದಲ್ಲೂ ಆಸ್ಪತ್ರೆ ಬಳಿ ಜಮಾಯಿಸಿದ್ದ ಅವರ ಅಭಿಮಾನಿಗಳು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಇತ್ತ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡಿದ್ದರು. ಸಿಬಿಐ ಅಧಿಕಾರಿಗಳನ್ನು ಬಿಜೆಪಿ ಸರ್ಕಾರ ಅಸ್ತ್ರವಾಗಿ ಬಳಕೆ ಮಾಡುತ್ತಿದೆ. ಇದು ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅವರು ಆರೋಪ ಮಾಡಿದ್ದಾರೆ.