ಉಡುಪಿ: ಕಳೆದೊಂದು ವಾರದಿಂದ ದುರ್ಬಲಗೊಂಡಿದ್ದ ನೈಋತ್ಯ ಮುಂಗಾರು ಚುರುಕು ಪಡೆದಿದೆ. ಉಡುಪಿ ಜಿಲ್ಲೆಯಲ್ಲಿ ಮಧ್ಯರಾತ್ರಿಯಿಂದ ನಿರಂತರವಾಗಿ ಭಾರೀ ಗಾಳಿ ಮಳೆಯಾಗುತ್ತಿದೆ.
ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರವು ಗುಡುಗು, ಮಿಂಚು ಸಹಿತ ಅತಿ ಭಾರೀ ಗಾಳಿ ಮಳೆಯ ಮುನ್ಸೂಚನೆ ನೀಡಿದೆ. ಇಂದಿನಿಂದ ನಾಲ್ಕು ದಿನಗಳ ಕಾಲ ಪ್ರತೀ 24 ತಾಸುಗಳಲ್ಲಿ ಜಿಲ್ಲೆಯಲ್ಲಿ 64 ರಿಂದ 115 ಮಿ.ಮೀ. ಮಳೆಯಾಗುವ ನಿರೀಕ್ಷೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
Advertisement
Advertisement
ತಾಸಿಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ ಜಿಲ್ಲೆಯ ಕಾರ್ಕಳ, ಕುಂದಾಪುರ, ಕಾಪು, ಬ್ರಹ್ಮಾವರ, ಬೈಂದೂರು, ಹೆಬ್ರಿ, ಉಡುಪಿ ಎಲ್ಲಾ ತಾಲೂಕುಗಳಲ್ಲಿಯೂ ವ್ಯಾಪಕ ಮಳೆ ಸುರಿಯುತ್ತಿದೆ. ಇದರಿಂದ ಭತ್ತದ ಬೇಸಾಯ ಆರಂಭಿಸಲು ಕಾದಿದ್ದ ಕೃಷಿಕರಿಗೆ ಅನುಕೂಲವಾಗಿದೆ.
Advertisement
Advertisement
ಉಡುಪಿ ನಗರ ಭಾಗದಲ್ಲಿ ಭಾರಿ ಮಳೆಯಾಗಿರುವುದರಿಂದ ವಾಹನ ಸಂಚಾರಕ್ಕೆ ಕೊಂಚ ವ್ಯತ್ಯಯವಾಯ್ತು. ಮುಂದಿನ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಜಿಲ್ಲೆಯಾದ್ಯಂತ ಮೋಡಮುಸುಕಿದ ವಾತಾವರಣವಿದೆ.