– ಸಮಾಜ ಮುಖಿ ಕೆಲಸ ಮಾಡ್ತಿದ್ದ ಡಾಕ್ಟರ್
ಹೈದರಾಬಾದ್: ಖ್ಯಾತ ದಂತ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ಕರ್ನೂಲ್ ಜಿಲ್ಲೆಯ ನಂದ್ಯಾಲದಲ್ಲಿ ನಡೆದಿದೆ.
ಮಾಧವಿ ಲತಾ ಆತ್ಮಹತ್ಯೆ ಮಾಡಿಕೊಂಡ ದಂತ ವೈದ್ಯೆ. ನಂದ್ಯಾಲದ ಶ್ರೀನಿವಾಸ ನಗರ ಬಳಿ ಡಾ.ಮಾಧವಿ ಲತಾ ದಂತ ಆಸ್ಪತ್ರೆಯನ್ನು ನಡೆಸುತ್ತಿದ್ದರು. ಆದರೆ ಭಾನುವಾರ ಮಧ್ಯಾಹ್ನ ತನ್ನ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ.
ಮೃತ ಡಾ.ಮಾಧವಿ ಲತಾ ಅನೇಕ ವರ್ಷಗಳ ಹಿಂದೆ ಲಕ್ಷ್ಮಣ್ ಎಂಬವರನ್ನು ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪತಿ ಕೂಡ ವೈದ್ಯರಾಗಿದ್ದು, ಇಬ್ಬರು ಸಮಾಜ ಮುಖಿ ಕೆಲಸಗಳನ್ನು ಮಾಡುತ್ತಿದ್ದರು. ಭಾನುವಾರ ಮಧ್ಯಾಹ್ನ ಪತಿ ಮತ್ತು ಮಕ್ಕಳು ಹೊರಗಡೆ ಹೋಗಿದ್ದರು. ಈ ವೇಳೆ ಡಾ.ಲತಾ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ರವಾನಿಸಿದ್ದಾರೆ. ಡಾ.ಮಾಧವಿ ಲತಾ ನಂದ್ಯಾಲದಲ್ಲಿ ಜನರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಹೀಗಾಗಿ ಇವರ ಸಾವಿನ ನಂತರ ನಂದ್ಯಾಲದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿತ್ತು.
ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆದರೆ ವೈದ್ಯೆಯ ಸಾವಿಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಹೀಗಾಗಿ ಪೊಲೀಸರು ವೈದ್ಯೆಯ ಸಂಬಂಧಿಕರು ಮತ್ತು ಸ್ನೇಹಿತರನ್ನು ವಿಚಾರಣೆ ಮಾಡುತ್ತಿದ್ದಾರೆ. ಕೌಟುಂಬಿಕ ಸಮಸ್ಯೆಗಳಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರ ಅಥವಾ ಬೇರೆ ಕಾರಣಗಳಿವೆಯೇ ಎಂದು ನಂದ್ಯಾಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.