ಮಡಿಕೇರಿ: ಮಳೆಗಾಲದ ಅವಧಿಯಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪ ಹಾಗೂ ಪ್ರವಾಹವನ್ನು ಎದುರಿಸಲು ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ನಿರ್ದೇಶನ ನೀಡಿದ್ದಾರೆ.
ಮುಂದಿನ ಮಳೆಗಾಲದ ಅವಧಿಯಲ್ಲಿ ಮಳೆಯಿಂದಾಗುವ ಹಾನಿಯ ಕುರಿತು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಬಗ್ಗೆ ನಗರದ ಜಿ.ಪಂ.ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
Advertisement
Advertisement
2018, 2019 ಮತ್ತು 2020 ರ ಆಗಸ್ಟ್ ತಿಂಗಳಲ್ಲಿ ಭಾರಿ ಮಳೆಯಿಂದಾಗಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಭೂಕುಸಿತದಿಂದ ಪ್ರಾಣಹಾನಿ, ಜಾನುವಾರು ಹಾನಿ ಹೀಗೆ ಹಲವು ಸಂಕಷ್ಟ ಎದುರಿಸುವಂತಾಯಿತು. ಆದ್ದರಿಂದ ಈ ಬಾರಿ ಸೂಕ್ಷ್ಮ ಪ್ರದೇಶಗಳಲ್ಲಿ ಭಾರಿ ಮಳೆಯಿಂದ ಸಂಭವಿಸಬಹುದಾದ ಪ್ರಕೃತಿ ವಿಕೋಪ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
Advertisement
Advertisement
ವ್ಯಾಪಕ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆಯಿಂದ ಮುಂಚಿತವಾಗಿ ಮಾಹಿತಿ ಪಡೆದು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಆ ದಿಸೆಯಲ್ಲಿ ಮಳೆ ಹಾಗೂ ಇತರ ಸಂಬಂಧ ಪ್ರತೀ ದಿನದ ಮಾಹಿತಿಯನ್ನು ಸಂಗ್ರಹಿಸಿ ಜಿಲ್ಲಾಡಳಿತಕ್ಕೆ ಒದಗಿಸುವಂತೆ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚಿಸಿದರು. ಪ್ರಕೃತಿ ವಿಕೋಪ ಎದುರಿಸುವ ನಿಟ್ಟಿನಲ್ಲಿ ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಅಗತ್ಯ ಕಾರ್ಯಯೋಜನೆ ರೂಪಿಸಬೇಕು. ಇಂತಿಷ್ಟು ಮಳೆಯಾಗುತ್ತದೆ ಎಂಬ ಬಗ್ಗೆ ಮಾಹಿತಿ ಒದಗಿಸಬೇಕು ಎಂದರು.
ಕಳೆದ ಬಾರಿಯಂತೆ ಪ್ರಕೃತಿ ವಿಕೋಪ ಎದುರಿಸುವ ನಿಟ್ಟಿನಲ್ಲಿ ಹೋಬಳಿವಾರು ನೋಡಲ್ ಅಧಿಕಾರಿಗಳು, ತಹಶೀಲ್ದಾರರು, ನಗರ, ಪಟ್ಟಣ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಇತರರು ತಮ್ಮ ಹಂತದಲ್ಲಿ ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಚಾರುಲತ ಸೋಮಲ್ ಅವರು ತಿಳಿಸಿದರು. ಪ್ರಕೃತಿ ವಿಕೋಪ ಹಾಗೂ ಪ್ರವಾಹ ಎದುರಿಸುವಲ್ಲಿ ಮುಂಚಿತವಾಗಿ ಮಾಹಿತಿ ನೀಡಿದ್ದಲ್ಲಿ ಭಾರಿ ಮಳೆಯಿಂದ ಸಂಭವಿಸಬಹುದಾದ ಅನಾಹುತವನ್ನು ತಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಮಳೆಗಾಲದ ಅವಧಿಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಹೆಚ್ಚಿನ ಎಚ್ಚರ ವಹಿಸಬೇಕಿದೆ. ಪ್ರಕೃತಿ ವಿಕೋಪ ಹಾಗೂ ಪ್ರವಾಹ ಎದುರಿಸುವ ನಿಟ್ಟಿನಲ್ಲಿ ಟಾಸ್ಕ್ ಫೋರ್ಸ್ ತಂಡ ರಚಿಸಲಾಗುವುದು. ಕಂದಾಯ, ಎನ್‍ಡಿಆರೆಫ್, ಎಸ್‍ಡಿಆರೆಫ್, ಅಗ್ನಿಶಾಮಕ, ಪೊಲೀಸ್, ಸೆಸ್ಕ್, ಅರಣ್ಯ ಹಾಗೆಯೇ ಎಂಜಿನಿಯರಿಂಗ್ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.