ಹಾಸನ: ಪ್ರವಾಹದಿಂದ ನೀರು ಉಕ್ಕಿಹರಿಯುತ್ತಿರುವ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಎಚ್ಚರಿಕೆ ಮೀರಿ ನೀರಿನ ಬಳಿ ಸೆಲ್ಫಿ ತೆಗೆದುಕೊಳ್ಳಲು ಮುಂದಾದರೆ ಆರು ತಿಂಗಳು ಜೈಲು ಶಿಕ್ಷೆ ಎಂದು ಸೂಚನಾ ಫಲಕ ಹಾಕುವಂತೆ ಸಚಿವ ಆರ್.ಅಶೋಕ್ ಹಾಸನ ಎಸ್‍ಪಿ ಶ್ರೀನಿವಾಸ್ ಗೌಡ ಅವರಿಗೆ ಸೂಚಿಸಿದ್ದಾರೆ.
Advertisement
ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, ಪ್ರತಿ ವರ್ಷ ಭಾರಿ ಮಳೆಯಾಗುತ್ತಿದ್ದು, ಜನರು ಮನೆ ಕಳೆದುಕೊಂಡು ತೊಂದರೆಗೊಳಗಾಗುತ್ತಿದ್ದಾರೆ. ಹೀಗಾಗಿ ಸಕಲೇಶಪುರದಲ್ಲಿ ಶಾಶ್ವತ ಪರಿಹಾರ ಕೇಂದ್ರ ನಿರ್ಮಿಸಲಾಗುವುದು. ಪುರುಷರು, ಮಹಿಳೆಯರಿಗೆ ಪ್ರತ್ಯೇಕ ವಾಸಕ್ಕೆ ಕೊಠಡಿಗಳು, ಪ್ರತ್ಯೇಕ ಶೌಚಾಲಯ, ಗ್ರಂಥಾಲಯ ಸೇರಿದಂತೆ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಶೀಘ್ರ ಅನುಮೋದನೆ ನೀಡಲಾಗುವುದು ಎಂದರು.
Advertisement
Advertisement
ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಪರಿಹಾರ ಕೇಂದ್ರ ನಿರ್ಮಾಣ ಮಾಡಲಾಗುವುದು. ಕಳೆದ ವರ್ಷ ಮನೆ ಕಳೆದುಕೊಂಡವರಿಗೆ ಈಗಾಗಲೇ 340 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲಾಗಿದೆ. ಸೋಮವಾರ ಪ್ರಧಾನಿ ಮೋದಿಯವರ ಜೊತೆ ವಿಡಿಯೋ ಕಾನ್ಪರೆನ್ಸ್ ನಲ್ಲಿ ನಾನು, ಬಸವರಾಜ ಬೊಮ್ಮಾಯಿ ಮಾತನಾಡಲಿದ್ದೇವೆ. ರಾಜ್ಯಕ್ಕೆ ಹೆಚ್ಚಿನ ಮುಂಗಡ ಹಣ ನೀಡುವಂತೆ ಮನವಿ ಮಾಡಲಿದ್ದೇವೆ. ಇದರಿಂದ ಪರಿಹಾರ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಸುಲಭವಾಗಲಿದೆ. ಈ ನಿಟ್ಟಿನಲ್ಲಿ ಪ್ರಧಾನಿಗೆ ಮನವಿ ಮಾಡುತ್ತೇವೆ ಎಂದು ತಿಳಿಸಿದರು.