– ಪತ್ರದಲ್ಲಿ ಕರ್ನಾಟಕ ಮಾದರಿಯ ಉಲ್ಲೇಖ
ನವದೆಹಲಿ: ಕೊರೊನಾ ಸೋಂಕಿನಿಂದ ಬಳಲುತ್ತಿರುವ ಬಡ ವರ್ಗದ ಜನರು ಮತ್ತು ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ಉಚಿತ ಚಿಕಿತ್ಸೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯಸಭೆ ಸಂಸದ ಜಿ.ಸಿ ಚಂದ್ರಶೇಖರ್ ಮನವಿ ಮಾಡಿದ್ದಾರೆ.
ಈ ಸಂಬಂಧ ಪತ್ರ ಬರೆದಿರುವ ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್, ಬಡವರು, ಕೂಲಿ ಕಾರ್ಮಿಕರು, ವಲಸೆ ಕಾರ್ಮಿಕರು ಕೊರೊನಾ ಸೋಂಕಿಗೆ ಸ್ವತಃ ಹಣ ಖರ್ಚು ಮಾಡಿ ಚಿಕಿತ್ಸೆಗೆ ಪಡೆದುಕೊಳ್ಳಲು ಸಾಧ್ಯವಿಲ್ಲ. ಈ ಹಿನ್ನೆಲೆ ಕೇಂದ್ರ ಸರ್ಕಾರ ಬಿಪಿಎಲ್ ಪಡಿತರ ಕಾರ್ಡು ಹೊಂದಿದ ಕುಟುಂಬಗಳಿಗೆ ಉಚಿತ ಚಿಕಿತ್ಸೆ ನೀಡಲು ಆದೇಶಿಸುವಂತೆ ಮನವಿ ಮಾಡಿದ್ದಾರೆ.
ಪತ್ರದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಆದೇಶವನ್ನು ಅವರು ಉಲ್ಲೇಖಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಉಚಿತ ಚಿಕಿತ್ಸೆ ನೀಡುವ ಬಗ್ಗೆ ಸಲಹೆ ನೀಡಿದ್ದೆ. ಕರ್ನಾಟಕ ಸರ್ಕಾರ ತಮ್ಮ ಸಲಹೆಯನ್ನು ಒಪ್ಪಿ ಉಚಿತ ಚಿಕಿತ್ಸೆ ನೀಡಲು ಮುಂದಾಗಿದೆ. ಕೇಂದ್ರ ಸರ್ಕಾರ ಕರ್ನಾಟಕದ ಮಾದರಿಯನ್ನು ಅಳವಡಿಸಿಕೊಂಡು ದೇಶಾದ್ಯಂತ ಬಡವರಿಗೆ ಉಚಿತವಾಗಿ ಸಿಗುವಂತೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಕರ್ನಾಟಕ ಸರ್ಕಾರ ಬಡವರಿಗೆ ಉಚಿತವಾಗಿ ಚಿಕಿತ್ಸೆ ನೀಡಲೆಂದು ‘ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್’ ರಚಿಸಿದೆ ಎಂಬುದನ್ನು ಪತ್ರದಲ್ಲಿ ಉಲ್ಲೇಖಿಸಿರುವ ಜಿ.ಸಿ. ಚಂದ್ರಶೇಖರ್, ಇದೇ ರೀತಿ ದೇಶವ್ಯಾಪ್ತಿ ಬಿಪಿಎಲ್ ಕಾರ್ಡ್ ಹೊಂದಿರುವ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಬೇಕು ಎಂದು ಜಿ.ಸಿ. ಚಂದ್ರಶೇಖರ್ ಹೇಳಿದ್ದಾರೆ.