ಬೆಂಗ್ಳೂರಿನ ಕೆ.ಆರ್. ಮಾರ್ಕೆಟ್ ಜೊತೆ 5 ವಾರ್ಡ್‌ಗಳು ಸೀಲ್ ಡೌನ್- ಸಿಎಂ ಸಭೆಯ ಮುಖ್ಯಾಂಶಗಳು

Public TV
2 Min Read
CM MEETING

– ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ಕ್ವಾರಂಟೈನ್
– ಕ್ವಾರಂಟೈನ್ ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಕೇಸ್

ಬೆಂಗಳೂರು: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆ.ಆರ್. ಮಾರ್ಕೆಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಖ್ಯವಾಗಿ ಸಿದ್ದಾಪುರ ವಾರ್ಡ್, ವಿವಿಪುರಂ, ಕಲಾಸಿ ಪಾಳ್ಯಗಳಲ್ಲಿ, ಪ್ರಕರಣ ವರದಿಯಾದ ಅಕ್ಕಪಕ್ಕದ ಬೀದಿಗಳು ಸೇರಿದಂತೆ ಸೀಲ್ ಡೌನ್ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ.

ಉಪ ಮುಖ್ಯಮಂತ್ರಿ ಸಿ.ಎನ್. ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್. ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್, ಪೊಲೀಸ್ ಆಯುಕ್ತ ಭಾಸ್ಕರ ರಾವ್ ಮತ್ತು ಇತರ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಉಪಸ್ಥಿತರಿದ್ದರು.

CM MEETING 2

ಸಭೆಯ ಮುಖ್ಯಾಂಶಗಳು
ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಹದಿನೈದು ದಿನಗಳಲ್ಲಿ ಅತಿ ಹೆಚ್ಚು ಮುನ್ನೆಚ್ಚರಿಕೆಯ ಕ್ರಮಗಳನ್ನು ವಹಿಸಿದರೆ ಮಾತ್ರ, ಸೋಂಕು ಹರಡುವ ಪ್ರಮಾಣವನ್ನು ನಿಯಂತ್ರಿಸಲು ಸಾಧ್ಯ. ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಶ್ರಮವಹಿಸಬೇಕೆಂದು ಆದೇಶಿಸಿದರು.

ಬೆಂಗಳೂರು ನಗರದಲ್ಲಿ ಹಾಗೂ ಇತರ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗಿರುವ ಪ್ರದೇಶಗಳಲ್ಲಿ ಲಾಕ್ ಡೌನ್ ಪ್ರಕ್ರಿಯೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವಂತೆ ಸೂಚಿಸಲಾಗಿದೆ. ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿರುವ ಕೆ.ಆರ್. ಮಾರ್ಕೆಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಖ್ಯವಾಗಿ ಸಿದ್ದಾಪುರ ವಾರ್ಡ್, ವಿವಿಪುರಂ, ಕಲಾಸಿ ಪಾಳ್ಯಗಳಲ್ಲಿ, ಪ್ರಕರಣ ವರದಿಯಾದ ಅಕ್ಕಪಕ್ಕದ ಬೀದಿಗಳು ಸೇರಿದಂತೆ ಸೀಲ್ ಡೌನ್ ಮಾಡಲು ನಿರ್ಧರಿಸಲಾಯಿತು.

CM MEETING 5

ಕ್ವಾರಂಟೈನ್ ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಯಿತು. ಅಗತ್ಯ ಬಿದ್ದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚಿಸಲಾಯಿತು. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ದರ ನಿಗದಿ ಮಾಡುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವ ಪ್ರಕರಣಗಳಲ್ಲಿ ಸೋಂಕಿತರಿಗೆ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಯಿತು. ಅಲ್ಲದೆ ಪ್ರತಿ ವಾರ್ಡಿನಲ್ಲಿ ಫೀವರ್ ಕ್ಲಿನಿಕ್ ಸ್ಥಾಪಿಸಲು ನಿರ್ಧರಿಸಲಾಯಿತು.

CORONA VIRUS 4

ಸಾಂಸ್ಥಿಕ ಕ್ವಾರಂಟೈನ್ ಗೆ ಒಳಗಾಗಿ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳು ಮತ್ತಿತರ ಸರ್ಕಾರಿ ಸಂಸ್ಥೆಗಳಲ್ಲಿ ಇರುವವರಿಗೆ ಅಗತ್ಯ ಮೂಲಸೌಕರ್ಯ ಒದಗಿಸುವಂತೆ ತಿಳಿಸಲಾಯಿತು. ಬೆಂಗಳೂರು ನಗರದಲ್ಲಿ ಯಾವುದೇ ಪರಿಸ್ಥಿತಿಯಲ್ಲೂ ಕೋವಿಡ್ 19 ಹೆಚ್ಚಾಗದಂತೆ ನೋಡಿಕೊಳ್ಳಬೇಕು. ಬೆಂಗಳೂರಿನಲ್ಲಿ ಆರ್ಥಿಕ ಚಟುವಟಿಕೆಗಳು ಪುನರಾರಂಭವಾಗಿದ್ದು, ಈ ಚಟುವಟಿಕೆಗಳಿಗೆ ಧಕ್ಕೆಯಾಗದಂತೆ ಕೋವಿಡ್ 19 ನಿಯಂತ್ರಿಸುವುದು ನಮ್ಮ ಕರ್ತವ್ಯ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಕ್ವಾರಂಟೈನ್ ಉಲ್ಲಂಘನೆ ಮತ್ತು ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮತ್ತು ಸ್ವಯಂ ಸೇವಕರನ್ನೊಳಗೊಂಡ ತಂಡಗಳು ಕಾರ್ಯನಿರ್ವಹಿಸುತ್ತಿವೆ. ವಾರ್ ರೂಂ ನಲ್ಲಿ ವಿವಿಧ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ಕುರಿತು ಕ್ಷಣ ಕ್ಷಣದ ಮಾಹಿತಿ ಲಭ್ಯವಿರಬೇಕು. ಸೋಂಕಿತರಿಗೆ ವಿಳಂಬವಿಲ್ಲದೆ ಚಿಕಿತ್ಸೆ ಒದಗಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.

Share This Article
Leave a Comment

Leave a Reply

Your email address will not be published. Required fields are marked *