ಕೋಲಾರ: ಟೊಮ್ಯಾಟೊ ಹಾಗೂ ಮಾವಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ರೈತ ಸಂಘ, ಹಸಿರು ಸೇನೆ ಕಾರ್ಯಕರ್ತರು ಟೊಮ್ಯಾಟೊ ಹಾಗೂ ಮಾವು ರಸ್ತೆಯಲ್ಲಿ ಸುರಿದು ಪ್ರತಿಭಟನೆ ನಡೆಸಿದರು.
ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ಟೊಮ್ಯಾಟೊ ಹಾಗೂ ಮಾವು ಸುರಿದು ಆಕ್ರೋಶ ಹೊರ ಹಾಕಿದ ಪ್ರತಿಭಟನಾಕಾರರು, ಕೃಷಿ, ತೋಟಗಾರಿಕೆ ಹಾಗೂ ಉಸ್ತುವಾರಿ ಸಚಿವರ ಪೋಟೋ ಹಾಕಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಸರ್ಕಾರ ಈ ಕೂಡಲೇ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಕೊರೊನಾ ಸಂಕಷ್ಟದಲ್ಲಿ ರೈತರು ಜೀವ ಉಳಿಸಿಕೊಳ್ಳುವುದೇ ಕಷ್ಟವಾಗಿದೆ. ಈ ಮಧ್ಯೆ ಬೆಳೆದ ಬೆಳೆಗಳಿಗೆ ಬೆಲೆ ಇಲ್ಲದೆ ರೈತರು ಮಾವು ಹಾಗೂ ಟೊಮ್ಯಾಟೊವನ್ನು ರಸ್ತೆಯಲ್ಲಿ ಸುರಿದು ಹೋಗುತ್ತಿದ್ದಾರೆ. ಇನ್ನೂ ಕೆಲವರು ಸಾಲ ಮಾಡಿ ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೆ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಂಬಲ ಬೆಲೆ ನೀಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಏಷ್ಯಾದಲ್ಲೇ ಅತಿ ದೊಡ್ಡ ಎರಡನೇ ಮಾರುಕಟ್ಟೆ ಎಂಬ ಖ್ಯಾತಿ ಪಡೆದಿರುವ ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದರು.