ಚಿತ್ರದುರ್ಗ: ಹಳೇ ಮನೆ ಗೋಡೆ ಕುಸಿದು ಮೂರು ವರ್ಷದ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕೆಲ್ಲೋಡು ಗ್ರಾಮದಲ್ಲಿ ನಡೆದಿದೆ.
ಮಳೆಯಿಂದ ನೆನೆದಿದ್ದ ಹಳೇ ಮನೆ ಗೋಡೆ ಕುಸಿತದಿಂದಾಗಿ ರಾತ್ರಿ ವೇಳೆ ಮನೆಯಲ್ಲಿ ಮಲಗಿದ್ದ ಬಾಲಕ ಲೋಹಿತ್ (3) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಗುವಿನ ಜೊತೆಯಲ್ಲಿ ತಂದೆ ಓಂಕಾರಪ್ಪ ಹಾಗೂ ತಾಯಿ ಸಾವಿತ್ರಮ್ಮ ಸಹ ಇದ್ದರು. ಪೋಷಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದೂ, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಹೆಚ್ಚಿನ ಚಿಕಿತ್ಸೆ ಗಾಗಿ ದಾವಣಗೆರೆಯ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಈ ಪ್ರಕರಣ ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಘಟನಾ ಸ್ಥಳಕ್ಕೆ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಭೇಟಿ ನೀಡುವುದಾಗಿ ತಿಳಿಸಿದ್ದಾರೆ. ಹಳೆ ಮನೆ ತೆರವುಗೊಳಿಸಿ, ತಕ್ಷಣ ಹೊಸ ಮನೆ ನಿರ್ಮಾಣಮಾಡಿಕೊಳ್ಳಲು ವ್ಯವಸ್ಥೆ ಮಾಡುವುದಾಗಿ ಶಾಸಕರು ಭರವಸೆ ನೀಡಿದ್ದಾರೆ.