ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಇಂದು ಕೂಡ ಮಳೆಯ ಅಬ್ಬರ ಮುಂದುವರಿದಿದೆ. ಜಿಲ್ಲೆಯ ಮಲೆನಾಡು ಭಾಗಗಳಾದ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಕಳಸ ತಾಲೂಕಿನಲ್ಲಿ ಭಾರೀ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
Advertisement
ಕಳೆದ ರಾತ್ರಿಯಿಂದ ಸುರಿಯುತ್ತಿರುವ ಮಹಾ ಮಳೆಗೆ ಕೊಪ್ಪ ತಾಲೂಕಿನ ಗುಡ್ಡೆ ತೋಟ ಗ್ರಾಮದ ಬಳಿ ಬೈಂದೂರಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಬಳಿ ರಸ್ತೆ ಬದಿಯಲ್ಲಿ ಗುಡ್ಡ ಕುಸಿದಿದ್ದು, ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಇದೇ ವೇಳೆ, ಜಯಪುರ ಸಮೀಪದ ಕೊಗ್ರೆ ಗ್ರಾಮದಲ್ಲಿ ಬೃಹತ್ ಮರಗಳು ರಸ್ತೆಗುರುಳಿವೆ ಹಾಗೂ ಧರೆ ಕುಸಿತ ಉಂಟಾಗಿದೆ.
Advertisement
Advertisement
ಧಾರಾಕಾರ ಮಳೆಯಿಂದ ಮರ-ಮಣ್ಣು ರಸ್ತೆಗೆ ಉರುಳಿ ಬಿದ್ದಿದ್ದರಿಂದ ಕೊಗ್ರೆ-ಬಸರೀಕಟ್ಟೆ ಗ್ರಾಮದ ಸಂಪರ್ಕ ಕೂಡ ಸಂಪೂರ್ಣ ಬಂದ್ ಆಗಿದ್ದು, ಮೂಡಿಗೆರೆ ತಾಲೂಕಿನ ದಾರದಹಳ್ಳಿಯಲ್ಲೂ ಭಾರೀ ಗಾಳಿ-ಮಳೆಗೆ ಸೀತಮ್ಮ ಎಂಬವರ ಮನೆ ಕುಸಿದಿದೆ. ಮನೆಯಲ್ಲೇ ಅಜ್ಜಿ ಒಬ್ಬರೇ ವಾಸವಿದ್ದು, ಮನೆ ಬೀಳುವುದನ್ನ ಕಂಡು ಹೊರಗಡೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ದೊಡ್ಡ ಅನಾಹುತವೊಂದು ಪಾರಾಗಿದೆ.
Advertisement
ಕಳಸ ತಾಲೂಕಿನ ಕುದುರೆಮುಖ ಸಮೀಪದ ನೆಲ್ಲಿಬೀಡು ಗ್ರಾಮದಲ್ಲಿ ಭಾರೀ ಮಳೆ-ಗಾಳಿಗೆ ಬಸ್ ತಂಗುದಾಣ ಕುಸಿದು ಬಿದ್ದಿದೆ. ಆ ಕುಸಿದ ಕಟ್ಟಡದ ಮತ್ತೊಂದು ಭಾಗದಲ್ಲಿ ಅಂಚೆ ಕಚೇರಿ ಇತ್ತು. ಆದರೆ, ಅಂಚೆ ಕಚೇರಿಗೆ ಏನೂ ಆಗಿಲ್ಲ. ಇನ್ನೂ ಕಳಸದಿಂದ ಹೊರನಾಡಿಗೆ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮೇಲೆ ನೀರು ಹರಿದಿದ್ದು ವಾಹನ ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ. ವೇಗವಾಗಿ ಹರಿಯುತ್ತಿರೋ ಭದ್ರಾ ನದಿ ನೀರು ಸೇತುವೆ ಅಪ್ಪಳಿಸಿ ನೀರು ಸೇತುವೆ ಮೇಲೆ ನುಗ್ಗುತ್ತಿದ್ದು, ಈ ಸೇತುವೆ ಸಂಪೂರ್ಣ ಮುಳುಗಡೆಯಾದರೆ, ಮಾವಿನಹೊಳ್ಳ, ಮೆಣಸಿನಹಾಡ್ಯ, ತುರಾ, ಬಲಿಗೆ ಸೇರಿದಂತೆ ಏಳೆಂಟು ಗ್ರಾಮದ ಜನ ತೀವ್ರ ಸಂಕಷ್ಟಕ್ಕೀಡಾಗಲಿದ್ದಾರೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ದಾರದಹಳ್ಳಿ, ಬಣಕಲ್, ಚಾರ್ಮಾಡಿ ಘಾಟ್, ಬಾಳೂರು ಸುತ್ತಮುತ್ತ ಧಾರಾಕಾರ ಮಳೆ ಸುರಿದಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದ ನಾಡಿನ ಜೀವನದಿಗಳಾದ ತುಂಗಾ-ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಮಲೆನಾಡಲ್ಲಿ ಇಂದು ಮಧ್ಯಾಹ್ನದ ಬಳಿಕ ಮಳೆಯ ಪ್ರಮಾಣ ಕೊಂಚ ತಗ್ಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂಗಾರು ಪ್ರಾರಂಭ – ಡಿಸಿಗಳ ಜೊತೆ ಸಿಎಂ ಸಭೆ