ವಿಜಯಪುರ: ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಜೀವನಾಡಿ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭಗೊಂಡಿದೆ.
ಮಹಾರಾಷ್ಟ್ರದಲ್ಲಿ ಹೆಚ್ಚು ಮಳೆಯಾಗಿರುವ ಕಾರಣ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚುವರಿ ನೀರು ಬಿಟ್ಟಿರುವ ಪರಿಣಾಮ ನೀರಿನ ಒಳಹರಿವು ಜೂನ್ ಮೊದಲ ವಾರದಲ್ಲೇ ಆರಂಭಗೊಂಡಿದೆ. ಈಗಾಗಲೇ 12,761 ಕ್ಯೂಸೆಕ್ ನೀರು ಜಲಾಶಯಕ್ಕೆ ಹರಿದು ಬಂದಿದೆ. ಇದರ ಜೊತೆಗೆ ಹಿಪ್ಪರಗಿ ಜಲಾಶಯದಿಂದ 10 ಸಾವಿರ ಕ್ಯೂಸೆಕ್ ನೀರು ಬಿಟ್ಟಿರುವ ಕಾರಣ ಒಳಹರಿವು ಮತ್ತಷ್ಟು ಹೆಚ್ಚಾಗಿದೆ.
ಮಹಾರಾಷ್ಟ್ರದ ನೀರು ಕರ್ನಾಟಕಕ್ಕೆ ಬಂದು ಸೇರುವ ರಾಜಾಪೂರ ಬ್ಯಾರೇಜ್ ಬಳಿ ಸಹ ಕೃಷ್ಣಾ ನದಿಯ ಒಳಹರಿವು ಹೆಚ್ಚಾಗಿದೆ. ಕಳೆದ ವರ್ಷ ಜಲಾಶಯಕ್ಕೆ ಜುಲೈ 3 ರಿಂದ ಒಳಹರಿವು ಆರಂಭಗೊಂಡಿತ್ತು. ಡಿಸೆಂಬರಿನಿಂದ ಒಳಹರಿವು ಸಂಪೂರ್ಣ ನಿಲ್ಲಿಸಲಾಗಿತ್ತು. ಆ ವರ್ಷದ ಜಲಾಶಯದ ಇತಿಹಾಸದಲ್ಲಿಯೇ ಅಪಾರ ಪ್ರಮಾಣದ ನೀರು ಹರಿದು ಬಂದಿತ್ತು.
519.60 ಮೀಟರ್ ಎತ್ತರದ ಜಲಾಶಯದಲ್ಲಿ ಇಂದು 509.55 ಮೀಟರ್ ನೀರು ಸಂಗ್ರಹವಿದೆ. ಸದ್ಯ 27.788 ಟಿಎಂಸಿ ನೀರು ಶೇಖರಣೆಯಾಗಿದೆ. ನಿತ್ಯ 14,050 ಮೀಟರ್ ನೀರು ಒಳಹರಿವಿನ ರೂಪದಲ್ಲಿ ಬರುತ್ತಿದ್ದು, 9,780 ಕ್ಯೂಸೆಕ್ ನೀರನ್ನು ಆಲಮಟ್ಟಿ ಜಲಾಶಯದಿಂದ ಬಿಡಲಾಗುತ್ತಿದೆ. ಜಲಾಶಯದ ಗೇಟ್ ಮತ್ತು ವಿದ್ಯುತ್ ಉತ್ಪಾದನಾ ಕೇಂದ್ರದ ಮೂಲಕ 9,150 ಕ್ಯೂಸೆಕ್ ನೀರು ನಾರಾಯಣಪುರ ಜಲಾಶಯಕ್ಕೆ ಹರಿದು ಬಿಡಲಾಗುತ್ತಿದೆ.
ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದೆ. ಇನ್ನೂ ಮಹಾರಾಷ್ಟ್ರ, ಮುಂಬೈನ ಕರಾವಳಿ ಪ್ರದೇಶದಲ್ಲಿ ‘ನಿಸರ್ಗ’ ಚಂಡಮಾರುತದ ಪರಿಣಾಮದಲ್ಲಿ ಭಾರೀ ಮಳೆಯಾಗಿದೆ. ಹೀಗಾಗಿ ಆಲಮಟ್ಟಿ ಜಲಾಶಯಕ್ಕೆ ನೀರಿನ ಒಳಹರಿವು ಆರಂಭವಾಗಿದೆ.
ಕ್ಯೂಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು?
ಕ್ಯೂಸೆಕ್ ಎಂಬುದು Cubic feet per Second ಹ್ರಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.