– ಉಡುಪಿಯಲ್ಲಿ ಯೆಲ್ಲೋ ಅಲರ್ಟ್
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇದರಿಂದ ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ.
ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಚಿಕ್ಕೋಡಿಯ ಮತ್ತೆರಡು ಸೇತುವೆಗಳು ಜಲಾವೃತವಾಗಿವೆ. ಮಹಾ ಮಳೆಯಿಂದಾಗಿ ಕೃಷ್ಣಾ ನದಿಯ ಒಳಹರಿವು ಹೆಚ್ಚಳವಾಗಿದ್ದು, ನದಿ ಪಾತ್ರದ ಜನರಲ್ಲಿ ಆತಂಕ ಮನೆಮಾಡಿದೆ. ಜಲಾವೃತವಾದ ಕಲ್ಲೋಳ-ಯಡೂರ, ಮಲಿಕವಾಡ-ದತ್ತವಾಡ ಸೇತುವೆಗಳು ಅಪಾಯದ ಮಟ್ಟದಲ್ಲಿದ್ದರೂ ಜನ ಬೇಕಾಬಿಟ್ಟಿ ಓಡಾಡುತ್ತಿದ್ದಾರೆ.
Advertisement
Advertisement
ಮತ್ತೊಂದೆಡೆ ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆಯಬ್ಬರ ಜೋರಾಗಿದೆ. ಕರಾವಳಿಯ ಹಲವು ಭಾಗಗಳಲ್ಲಿ ಮಳೆಯಬ್ಬರದಿಂದಾಗಿ ರಸ್ತೆಗಳಲ್ಲಿ ನೀರು ತುಂಬಿದ್ದು, ಅಂಗಡಿ ಮುಂಗಟ್ಟುಗಳಿಗೂ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಕಾಳಿ ನದಿ ಭಾಗದಲ್ಲಿ ಸತತ ಮಳೆಯಿಂದಾಗಿ ಜಲಾಶಯದ ಒಳಹರಿವಿನ ಪ್ರಮಾಣ ಏರಿಕೆಯಾಗಿದ್ದು, ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳಲು ಜಿಲ್ಲಾಡಳಿತ ಸೂಚಿಸಿದೆ.
Advertisement
ಉಡುಪಿಯಲ್ಲೂ ವರುಣ ತನ್ನ ಪ್ರತಾಪ ತೋರುತ್ತಿದ್ದಾನೆ. ಕಳೆದ 24 ಗಂಟೆಯಲ್ಲಿ ಉಡುಪಿಯಲ್ಲಿ 62 ಮಿ.ಮೀ ಮಳೆ ಸುರಿದಿದ್ದು, ಯಲ್ಲೋ ಅಲರ್ಟ್ ಮುಂದುವರಿದಿದೆ. ಬ್ರಹ್ಮಾವರ ತಾಲೂಕಿನಲ್ಲಿ ಸಿಡಿಲು ಬಡಿತಕ್ಕೆ 5 ಮನೆ, 2 ಕೊಟ್ಟಿಗೆಗಳು ಭಾಗಶಃ ಹಾನಿಗೊಳಗಾಗಿದ್ದು, ಸುಮಾರು 1.75 ಲಕ್ಷ ರೂ. ನಷ್ಟವಾಗಿದೆ.
Advertisement
ಬೀದರ್ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಬಿತ್ತನೆ ಮಾಡಲು ಸಿದ್ಧಮಾಡಿಕೊಂಡಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಭಾರೀ ಮಳೆ ಒಂದಷ್ಟು ಭಾಗದ ಜನರಿಗೆ ನೆಮ್ಮದಿ ತಂದರೆ, ಮತ್ತೊಂದಷ್ಟು ಭಾಗದ ಜನರ ಜನಜೀವನವನ್ನು ಅಸ್ತವ್ಯಸ್ಥ ಮಾಡಿದೆ.
ತುಂಗಾ ಜಲಾಶಯ ಬಹುತೇಕ ಭರ್ತಿ
ಮಲೆನಾಡಿನ ಭಾಗ ಹಾಗೂ ತುಂಗಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆ ಗಾಜನೂರು ಸಮೀಪದ ತುಂಗಾ ಜಲಾಶಯ ಈಗಾಗಲೇ ಭರ್ತಿಯಾಗಿದ್ದು, 4 ಕ್ರಸ್ಟ್ ಗೇಟ್ ಮೂಲಕ 2 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದೆ. ತುಂಗಾ ಜಲಾಶಯ 3.25 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿದ್ದು, 100 ಮೀ. ಎತ್ತರವಿದೆ. ಮುಂಗಾರು ಆರಂಭದಲ್ಲಿಯೇ ಜಲಾಶಯ ಭರ್ತಿಯಾಗಿದ್ದು, ಜಲಾಶಯಕ್ಕೆ ಪ್ರತಿದಿನ 7 ಸಾವಿರ ಕ್ಯೂಸೆಕ್ ಒಳಹರಿವು ಬರುತ್ತಿದೆ.
ಒಳಹರಿವು ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇರುವುದರಿಂದ 7 ಸಾವಿರ ಕ್ಯೂಸೆಕ್ ಒಳಹರಿವು ನೀರನ್ನು ಜಲಾಶಯದಿಂದ ಹೊರಗೆ ಬಿಡಲಾಗುತ್ತಿದೆ. ಜಲಾಶಯದ 4 ಕ್ರಸ್ಟ್ ಗೇಟ್ ಗಳ ಮೂಲಕ 2 ಸಾವಿರ ಕ್ಯೂಸೆಕ್ ನೀರನ್ನು ನದಿ ಪಾತ್ರಕ್ಕೆ ಹಾಗೂ 4,750 ಕ್ಯೂಸೆಕ್ ನೀರನ್ನು ವಿದ್ಯುತ್ ಉತ್ಪಾದನೆಗೆ ಬಿಡುಗಡೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮಳೆ ಮತ್ತಷ್ಟು ಹೆಚ್ಚಳವಾದರೆ ಕ್ರಸ್ಟ್ ಗೇಟ್ ಮೂಲಕ ಮತ್ತಷ್ಟು ನೀರನ್ನು ನದಿಗೆ ಬಿಡಲು ಚಿಂತಿಸಲಾಗುವುದು. ಆದ್ದರಿಂದ ಜಲಾನಯನ ನದಿ ಪಾತ್ರದ ಜನರು ಮುಂಜಾಗ್ರತೆಯಿಂದ ಇರುವಂತೆ ಜಲಾಶಯದ ಕಾರ್ಯಪಾಲಕ ಅಭಿಯಂತರರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.