ಬೆಂಗಳೂರು: ಶಾಸಕರ ಮನೆ ಹಾಗೂ ಪೊಲೀಸ್ ಠಾಣೆ ಧ್ವಂಸಗೊಳಿಸಿದ್ದ ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಅವರಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗಲು ಸೂಚಿಸಿದೆ. ಇದರ ನಡುವೆ ಸಂಪತ್ ರಾಜ್ ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಸದ್ಯ ಸಂಪತ್ ರಾಜ್ ಹೆಬ್ಬಾಳದ ಬ್ಯಾಪಿಸ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೊರೊನಾ ಸೋಂಕಿನಿಂದ ಗುಣಮುಖವಾದ ಬಳಿಕ ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ. ಇತ್ತ ಸಂಪತ್ ರಾಜ್ ಅವರ ನಿವಾಸ ಗೋಡೆಗೆ ಕೋವಿಡ್ ಸ್ಟಿಕ್ಕರ್ ಸಹ ಅಂಟಿಸಲಾಗಿದೆ. ಸೋಂಕಿನಿಂದ ಬಳಲುತ್ತಿರುವ ಕಾರಣ ಅವರು ವಿಚಾರಣೆಗೆ ಹಾಜರಾಗುವುದು ಬಹುತೇಕ ಅನುಮಾನವಾಗಿದೆ.
ತೀವ್ರ ಸಂಚಲನ ಸೃಷ್ಟಿಸಿದ್ದ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಹೀಗಾಗಿ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ ಎನ್ನಲಾಗಿದೆ. ಪ್ರಕರಣದ ಸಂಬಂಧ ಬುಧವಾರ ಸಂಪತ್ ರಾಜ್ ಅವರಿಗೆ ನೋಟಿಸ್ ಕೊಡಲು ತೆರಳಿದ್ದಾಗ ಕಳೆದ 1 ವಾರದಿಂದ ಮನೆಯಲ್ಲಿ ಇಲ್ಲದಿರುವುದರ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಹೀಗಾಗಿ ನಾಳೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಪ್ರಕರಣದಲ್ಲಿ ಸಂಪತ್ ರಾಜ್ ಭಾಗಿಯಾಗಿರುವ ಕುರಿತು ಮಹತ್ವದ ಸಾಕ್ಷ್ಯ ಸಿಕ್ಕಿದೆ ಎನ್ನಲಾಗಿದೆ.
ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚುವ ಸಂದರ್ಭದಲ್ಲಿ ಘಟನಾ ಸ್ಥಳದಿಂದ 100 ಮೀಟರ್ ದೂರದಲ್ಲಿ ಸಂಪತ್ ರಾಜ್ ಇದ್ದರು ಎನ್ನಲಾಗಿದೆ. ಸಂತೋಷ್ ಮನೆಯಲ್ಲಿ ಆಶ್ರಯ ಪಡೆದಿದ್ದರು. ಆಗಸ್ಟ್ 4ರಂದು ಸಭೆ ನಡೆಸಿದ್ದ ಬಗ್ಗೆ ತಾಂತ್ರಿಕ ಮಾಹಿತಿ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ಸಂಪತ್ ರಾಜ್‍ಗೆ ಇದೀಗ ಸಂಕಷ್ಟ ಶುರುವಾಗಿದೆ.