ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ಜೂನ್ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ತಿಳಿಸಿದರು.
ಅವರು ಶನಿವಾರ ಸೋಗಾನೆಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಬೆಂಗಳೂರು ವಿಮಾನ ನಿಲ್ದಾಣದ ಬಳಿಕ ಶಿವಮೊಗ್ಗದಲ್ಲಿಯೇ ಅಂತಹ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. ಹಣಕಾಸಿನ ಅಡಚಣೆ ನಡುವೆಯೂ ಅನುದಾನ ಬಿಡುಗಡೆಗೊಳಿಸಿ ತ್ವರಿತಗತಿಯಲ್ಲಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.
ವಿಮಾನ ನಿಲ್ದಾಣ ನಿರ್ಮಾಣದಿಂದ ಮಧ್ಯ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಗತಿ ನಿರೀಕ್ಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸರ್ವಾಂಗೀಣ ಪ್ರಗತಿ ಸಾಧ್ಯವಾಗಲಿದೆ. ಹೆಚ್ಚಿನ ಕೈಗಾರಿಕೆಗಳು ಪ್ರಾರಂಭವಾಗಿ ಉದ್ಯೋಗವಕಾಶ ಸೃಷ್ಟಿಯಾಗಲಿದೆ ಎಂದರು.
ರನ್ ವೇ ಕಾಮಗಾರಿ, ಸಂಪರ್ಕ ರಸ್ತೆ, ಪೆರಿಮೀಟರ್ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಕಾಂಪೌಡ್ ನಿರ್ಮಾಣ ಬಹುತೇಕ ಪೂರ್ಣಗೊಂಡಿದ್ದು, 15900 ಮೀಟರ್ ಪೈಕಿ 11500 ಮೀಟರ್ ಕಾಂಪೌಡ್ ನಿರ್ಮಾಣ ಪೂರ್ಣಗೊಳಿಸಲಾಗಿದೆ ಎಂದರು. ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ವಿಮಾನ ನಿಲ್ದಾಣ ಕಟ್ಟಡದ ವಿನ್ಯಾಸ ಅನಾವರಣ ಮಾಡಿದರು.
ಮುಖ್ಯಮಂತ್ರಿ @BSYBJP ರವರು ಇಂದು ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದರು. (1/2) pic.twitter.com/tSGzJ5p08P
— CM of Karnataka (@CMofKarnataka) June 12, 2021
ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಅಶೋಕ ನಾಯ್ಕ್, ಅರಗ ಜ್ನಾನೇಂದ್ರ, ರುದ್ರೇಗೌಡ, ಆರ್ಯವೈಶ್ಯ ನಿಗಮ ಅಧ್ಯಕ್ಷ ಡಿ.ಎಸ್.ಅರುಣ್, ಮೇಯರ್ ಸುನಿತಾ ಅಣ್ಣಪ್ಪ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.