ಬೆಂಗಳೂರು: ಕರ್ನಾಟಕದ ಕೆಲವೆಡೆ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಮಾನ ಇಲಾಖೆ ನೀಡಿದೆ. ಈ ನಿಟ್ಟಿನಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಿವಿಧ ದಿನಗಳಲ್ಲಿ, ಹಲವು ಪ್ರದೇಶಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಮಾತನಾಡಿ, ಜಾರ್ಖಂಡ್ ನಲ್ಲಿ ವಾಯುಭಾರ ಕುಸಿತವಾಗಿರೋದ್ರಿಂದ ಹಾಗೂ ಪೂರ್ವ ಅರಬ್ಬೀ ಸಮುದ್ರದಲ್ಲಿ ಮತ್ತೊಂದು ಟ್ರಫ್ ಕರ್ನಾಟಕದ ಕರಾವಳಿ ಪ್ರದೇಶ ಸಮೀಪಿಸತ್ತಾ ಇರೋದರಿಂದ ಮಳೆಯಾಗುತ್ತಿದೆ. ಇದರ ಪರಿಣಾಮ ಕರಾವಳಿ ಪ್ರದೇಶಗಳಲ್ಲಿ ಇಂದಿನಿಂದ 18ರವರೆಗೆ ವ್ಯಾಪಕ ಮಳೆಯಾಗಲಿದೆ.
ಇಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ಮಾನ್ಸೂನ್ ಚುರುಕಾಗಿದೆ. ಉತ್ತರ ಒಳನಾಡಿನಲ್ಲಿ ಕೆಲವೆಡೆ ಮಳೆಯಾಗಿದೆ. ಮುಖ್ಯವಾಗಿ ಇಂದು ಪೆಣಂಬೂರು, ಭಾಗಮಂಡಲ, ಆಗುಂಬೆಯಲ್ಲಿ 9 ಸೆಂಟಿಮೀಟರ್ ಹಾಗೂ ಮಂಗಳೂರು 8 ಸೆಂಟಿ ಮೀಟರ್ ಮಳೆಯಾಗಿದೆ.
ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ. ಕರಾವಳಿ ಜಿಲ್ಲೆಗಳಿಗೆ ಜೂನ್ 16 ಹಾಗೂ 17 ರಂದು ಆರೆಂಜ್ ಅಲರ್ಟ್ ನ್ನು ಕೊಡಲಾಗಿದೆ. ಜೂನ್ 18 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಜೂನ್ 14-17ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಿಗೆ ಜೂನ್ 14-17 ರವರೆಗೆ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಲವಾದ ಗಾಳಿ ಬೀಸುವ ಹಿನ್ನೆಲೆ ಮೀನಗಾರರು ಇಂದಿನಿಂದ ಜೂನ್ 17ರವರೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಕೊಡಲಾಗಿದೆ.