ಬೆಂಗಳೂರು: ಶಾಲಾ ಮುಖ್ಯೋಪಾಧ್ಯಾಯರನ್ನು ಕೋವಿಡ್ ಸೇವೆಯಿಂದ ಮುಕ್ತಿಗೊಳಿಸಲು ಸಚಿವ ಸುರೇಶ್ ಕುಮಾರ್ ಸೂಚಿಸಿದ್ದಾರೆ.
ಈ ಸಂಬಂಧ ಆಯುಕ್ತರಿಗೆ ಪತ್ರ ಬರೆದಿರುವ ಸಚಿವರು, ಕೋವಿಡ್ ಸಂದರ್ಭದಲ್ಲಿ ಸರ್ಕಾರಿ ಶಾಲಾ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರುಗಳನ್ನು ತುರ್ತು ಸೇವೆಗೆ ಬಳಸಿಕೊಳ್ಳಲಾಗಿದೆ. ಶೈಕ್ಷಣಿಕ ಚಟುವಟಿಕೆಗಳಿಗೆ ಶಾಲೆಗಳಲ್ಲಿ ಶಿಕ್ಷಕರ, ವಿಶೇಷವಾಗಿ ಮುಖ್ಯ ಶಿಕ್ಷಕರ ಅಲಭ್ಯತೆಯ ಹಿನ್ನೆಲೆಯಲ್ಲಿ ಪ್ರತಿಕೂಲ ಪರಿಣಾಮವನ್ನು ಬೀರುತ್ತಿದೆ ಎಂದು ಬರೆದಿದ್ದಾರೆ.
ಅಲ್ಲದೆ ವಿದ್ಯಾರ್ಥಿಗಳ ಕಲಿಕೆಯನ್ನು ಮುಂದುವರಿಸುವ ದೂರದೃಷ್ಟಿ ಯೋಜನೆಯಾದ ವಿದ್ಯಾಗಮನ ಅನುಷ್ಠಾನ, ಮಧ್ಯಾಹ್ನ ಉಪಹಾರ ಯೋಜನೆಯ ಅನುಷ್ಠಾನವು ಸಮರ್ಪಕವಾಗಬೇಕಾದ್ದಲ್ಲಿ ಶಾಲೆಗಳಲ್ಲಿ ಕನಿಷ್ಟ ಪಕ್ಷ ಮುಖ್ಯೋಪಾಧ್ಯಾಯರು ಲಭ್ಯವಿರಬೇಕಾದ ಅವಶ್ಯಕವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮುಖ್ಯ ಶಿಕ್ಷಕರುಗಳಿಗೆ ಕೋವಿಡ್ ಜವಾಬ್ದಾರಿಯಿಂದ ಮುಕ್ತಗೊಳಿಸುವಲ್ಲಿ ಅವಶ್ಯಕ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಈ ಮೂಲಕ ಸೂಚಿಸಿರುವುದಾಗಿ ಸಚಿವರು ತಿಳಿಸಿದ್ದಾರೆ.