ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿಯ ಮಹತ್ವದ ಸಭೆಯಲ್ಲಿ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಾ.ಸಿ.ಎನ್ ಅಶ್ವತ್ಥ ನಾರಾಯಣ ಭಾಗವಹಿಸಿದ್ದಾರೆ.
ಕೇರಳದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ದೆಹಲಿಯಲ್ಲಿ ಬಿಜೆಪಿ ವರಿಷ್ಠರ ತಂತ್ರಗಾರಿಕೆ ಹಿನ್ನೆಲೆಯಲ್ಲಿ ಶನಿವಾರ ನಡೆದ ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲಿ ಅಶ್ವತ್ಥನಾರಾಯಣ ಭಾಗವಹಿಸಿದರು.
ಈ ಬಾರಿಯ ಕೇರಳ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಪಡೆದು ಅಧಿಕಾರದ ಗದ್ದುಗೆ ಹಿಡಿಯಬೇಕೆಂಬ ಗುರಿ ಹೊಂದಿದೆ. ಹಾಗಾಗಿ ಬಿಜೆಪಿ ವರಿಷ್ಠರರಾದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನೇತೃತ್ವದಲ್ಲಿ ನವದೆಹಲಿಯಲ್ಲಿ ಮಹತ್ವದ ಸಭೆ ನಡೆದಿದೆ.
ಕೇರಳ ಚುನಾವಣೆಗೆ ಬಿಜೆಪಿಯ ಸಹ ಉಸ್ತುವಾರಿ ಆಗಿರುವ ಅಶ್ವತ್ಥ ನಾರಾಯಣ ದೆಹಲಿಗೆ ತೆರಳಿದ್ದು ಸತತ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದಾರೆ. ಈ ಸಭೆಯಲ್ಲಿ ಗೃಹ ಸಚಿವರಾದ ಅಮಿತ್ ಷಾ, ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್, ಬಿಎಲ್ ಸಂತೋಷ್ ಸೇರಿ ಇತರ ಬಿಜೆಪಿ ನಾಯಕರು ಭಾಗವಹಿಸಿದ್ದರು.