ಪಣಜಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಇದೀಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಸಾಕಷ್ಟು ಅವಕಾಶಗಳನ್ನು ನೀಡಿದೆ ಎಂದು ಹೇಳಿದ್ದಾರೆ. ಈ ಮೂಲಕ ಪರೋಕ್ಷವಾಗಿ ನಾಯಕತ್ವ ಬದಲಾವಣೆ ಪರವಾಗಿ ಮಾತನಾಡಿದ್ದಾರೆ.
ಗೋವಾದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರು ಜನಪ್ರಿಯ ನಾಯಕರು, ಬಿಎಸ್‍ವೈ ಅವರ ಜನಪ್ರಿಯತೆಯನ್ನು ಎಲ್ಲರೂ ಒಪ್ಪಿಕೊಳ್ಳಲೇಬೇಕು. ಅವರೊಬ್ಬ ಉತ್ತಮ ನಾಯಕ, ಅದರಂತೆ ಪಕ್ಷ ಅವರಿಗೆ ಸಾಕಷ್ಟು ಅವಕಾಶಗಳನ್ನ ನೀಡಿದೆ. ಇದಕ್ಕಾಗಿಯೇ ನಾಲ್ಕು ಬಾರಿ ಮುಖ್ಯಮಂತ್ರಿ ಆಗಿ ಕರ್ನಾಟಕ ಜನತೆ ಸೇವೆ ಮಾಡಲು ಅವಕಾಶ ಸಿಕ್ಕಿದೆ. ವಿಪಕ್ಷ ನಾಯಕರಾಗಿ, ಉಪ ಮುಖ್ಯಮಂತ್ರಿಯಾಗಿ, ನಾಲ್ಕು ಬಾರಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಪಕ್ಷ ಅವಕಾಶ ನೀಡಲಾಗಿದೆ ಎಂದರು.
ಕಾಂಗ್ರೆಸ್, ಜನತದಳ, ಕಮ್ಯೂನಿಸ್ಟ್ ಪಕ್ಷಗಳಲ್ಲಿ ಈ ರೀತಿ ಅವಕಾಶ ನೀಡಿಲ್ಲ, ಬಿಜೆಪಿ ಎಲ್ಲ ಅವಕಾಶವನ್ನು ಅವರಿಗೆ ನೀಡಿದೆ. ಬಿಜೆಪಿ ಕಾರ್ಯಕರ್ತನಿಂದ ಹಿಡಿದು ನಾಯಕನಾಗಿ ಬೆಳೆಯುವಂತೆ ಅವಕಾಶ ನೀಡಿದೆ. ಎಲ್ಲ ಕಾರ್ಯಕರ್ತರ ಶಕ್ತಿಯಿಂದ ಇಂದು ಬಿಜೆಪಿಗೆ ಶಕ್ತಿ ಬಂದಿದೆ ಎಂದು ಹೇಳಿದ್ದಾರೆ.
ಯಡಿಯೂರಪ್ಪನವರ ಬಗ್ಗೆ ಸಚಿವರು, ಶಾಸಕರು ಬೇಸರ ವ್ಯಕ್ತಪಡಿಸುತ್ತಿರುವುದರ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಅದರ ಬಗ್ಗೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಮಾತನಾಡುತ್ತಾರೆ. ರಾಜಕಾರಣದಲ್ಲಿ ಇವೆಲ್ಲವೂ ಸಹಜ, ಈ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ ಎಂದಿದ್ದಾರೆ.