ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ಜೆಡಿಎಸ್ ಪಕ್ಷವನ್ನು ಬಿಡುವುದಿಲ್ಲ ಎಂದು ಮಾಜಿ ಶಾಸಕ ವೈಎಸ್‌ವಿ ದತ್ತಾ ಹೇಳಿದ್ದಾರೆ.
ಆಪ್ ಪಕ್ಷಕ್ಕೆ ದತ್ತಾ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಗೆ ಸಂಬಂಧಿಸಿದಂತೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಅವರು, ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿ ಸುಳ್ಳು. ನಾನು ಬೇರೆ ಪಕ್ಷಕ್ಕೆ ಹೋಗುವ ಯೋಚನೆಯೂ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಯಾಕೆ ಈ ರೀತಿಯ ಸುಳ್ಳು ಸುದ್ದಿ ಪ್ರಸಾರ ಮಾಡುತ್ತಿದ್ದರೋ ಗೊತ್ತಿಲ್ಲ. ಆಮ್ ಆದ್ಮಿ ಪಕ್ಷದವರು ನನ್ನನ್ನು ಕರೆದಾಗ ನಾನು ಜೆಡಿಎಸ್ ನಲ್ಲಿ ಇರುತ್ತೇನೆ ಎಂದಿದ್ದೆ. ಈಗಲೂ ಸ್ಪಷ್ಟವಾಗಿ ಹೇಳುತ್ತೇನೆ ನಾನು ಜೆಡಿಎಸ್ ಪಕ್ಷ ಬಿಡುವುದಿಲ್ಲ ಎಂದು ತಿಳಿಸಿದರು.
2013ರಲ್ಲಿ ಚಿಕ್ಕಮಗಳೂರಿನ ಕಡೂರು ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿದ್ದ ದತ್ತಾ 2018ರ ಚುನಾವಣೆಯಲ್ಲಿ ಸೋತಿದ್ದರು. ಪ್ರಸ್ತುತ ದತ್ತಾ ಅವರನ್ನು ಜೆಡಿಎಸ್ ತನ್ನ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದೆ.